ಪರ್ವೇಶ್ ವರ್ಮಾ
ನವದೆಹಲಿ: ನಾನು ಬಿಜೆಪಿಯ ಅತ್ಯಂತ ಶಿಸ್ತಿನ ಕಾರ್ಯಕರ್ತನಾಗಿದ್ದು, ಪಕ್ಷ ವಹಿಸುವ ಜವಾಬ್ದಾರಿ ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ ಎಂದು ದೆಹಲಿ ಬಿಜೆಪಿ ಶಾಸಕ ಪರ್ವೇಶ್ ವರ್ಮಾ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೆಹಲಿಯ ಮೇಲೆ ನಮಗೆ ದೊಡ್ಡ ಜವಾಬ್ದಾರಿ ಇದೆ ಎಂದು ನಾನು ಭಾವಿಸುತ್ತೇನೆ. ದೆಹಲಿಯ ಜನರು ನಮಗೆ ಪ್ರೀತಿ ಮತ್ತು ಆಶೀರ್ವಾದವನ್ನು ನೀಡಿದ್ದಾರೆ. 26 ವರ್ಷಗಳ ನಂತರ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚಿಸುತ್ತಿದೆ. ಈ ಸಂದರ್ಭದಲ್ಲಿ ನಾನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಧನ್ಯವಾದ ಹೇಳುತ್ತೇನೆ. ಅವರ ನಾಯಕತ್ವದಲ್ಲಿ ನಾವು ದೆಹಲಿಯನ್ನು ವಿಶ್ವದ ಅತ್ಯಂತ ಸುಂದರ ರಾಜಧಾನಿಯನ್ನಾಗಿ ಮಾಡುತ್ತೇವೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
‘ಇಂದು ಅತ್ಯಂತ ಮಹತ್ವದ ದಿನವಾಗಿದೆ. ನಾವು ‘ವಿಕಸಿತ ದೆಹಲಿ’ ಬಗ್ಗೆ ನಮ್ಮ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ. ಹಾಗೆಯೇ ಪಕ್ಷದ ಗೆಲುವಿಗೆ ಕಾರಣರಾದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದಿದ್ದಾರೆ.
ಉಪಮುಖ್ಯಮಂತ್ರಿಯಾಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ವರ್ಮಾ, ‘ನಾನು ಬಿಜೆಪಿಯ ಅತ್ಯಂತ ಶಿಸ್ತಿನ ಕಾರ್ಯಕರ್ತ, ನನ್ನ ಕೊನೆಯ ಉಸಿರು ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ ಎಂದು ಬಹಳ ದಿನಗಳಿಂದ ಹೇಳುತ್ತಾ ಬಂದಿದ್ದೇನೆ. ಬಿಜೆಪಿ ನನ್ನ ತಂದೆಯನ್ನು ದೆಹಲಿಯ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವರನ್ನಾಗಿ ಮಾಡಿತ್ತು. ತಂದೆಯವರು ಕೊನೆಯ ಉಸಿರು ಇರುವವರೆಗೂ ಪಕ್ಷಕ್ಕಾಗಿ ಸೇವೆ ಸಲ್ಲಿಸಿದ್ದರು. ನಾನು ಕೂಡಾ ತಂದೆಯವರಂತೆಯೇ ಪಕ್ಷ ವಹಿಸುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ’ ಎಂದು ಹೇಳಿದ್ದಾರೆ.
ದೆಹಲಿಯ ರಾಮಲೀಲಾ ಮೈದಾನದಲ್ಲಿ ಇಂದು (ಗುರುವಾರ) ನಡೆದ ಸಮಾರಂಭದಲ್ಲಿ ಶಾಲಿಮಾರ್ ಬಾಗ್ ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರು ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ ಆರು ಸಚಿವರು ಸಹ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರೇಖಾ ಗುಪ್ತಾ ಅವರು 32 ವರ್ಷಗಳ ದೆಹಲಿ ವಿಧಾನಸಭಾ ಇತಿಹಾಸದಲ್ಲಿ ಮುಖ್ಯಮಂತ್ರಿಯಾಗಿರುವ ನಾಲ್ಕನೇ ಮಹಿಳೆಯಾಗಿದ್ದಾರೆ. ಬಿಜೆಪಿಯ ಸುಷ್ಮಾ ಸ್ವರಾಜ್, ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಹಾಗೂ ಎಎಪಿಯ ಆತಿಶಿ ಅವರು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.