ಛತ್ರಪತಿ ಸಂಭಾಜಿನಗರ: ಮಹಾರಾಷ್ಟ್ರ ನಿರ್ಗಮಿತ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಉಪಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಳ್ಳದಿದ್ದರೆ, ಅದನ್ನು ಪಕ್ಷದ ಯಾರಿಗಾದರೂ ನೀಡಲಾಗುತ್ತದೆ ಎಂದು ಶಿವಸೇನಾ ನಾಯಕ ಸಂಜಯ್ ಶಿರ್ಸತ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸಚಿವರಾಗಿ ಶಿಂದೆ ಅವರು ಖಂಡಿತವಾಗಿಯೂ ಕೇಂದ್ರಕ್ಕೆ ಹೋಗುವುದಿಲ್ಲ. ಉಪಮುಖ್ಯಮಂತ್ರಿ ಸ್ಥಾನವನ್ನು ಒಪ್ಪಿಕೊಳ್ಳದಿದ್ದರೆ, ನಮ್ಮ ಪಕ್ಷದ (ಶಿವಸೇನಾ) ಇತರ ನಾಯಕರಿಗೆ ಆ ಸ್ಥಾನ ನೀಡಲಾಗುತ್ತದೆ. ಈ ಕುರಿತು ಇಂದು ಸಂಜೆಯೊಳಗೆ ಶಿಂದೆ ಅವರು ನಿರ್ಧರಿಸಲಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.
ಮಹಾರಾಷ್ಟ್ರ ಮುಂದಿನ ಮುಖ್ಯಮಂತ್ರಿಯನ್ನು ಹೆಸರಿಸುವ ಬಿಜೆಪಿ ನಾಯಕತ್ವದ ನಿರ್ಧಾರವನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ. ಪ್ರಕ್ರಿಯೆಯಲ್ಲಿ ಯಾವುದೇ ಅಡಚಣೆಯಾಗುವುದಿಲ್ಲ ಎಂದು ಶಿಂದೆ ಹೇಳಿದ್ದಾರೆ.
ಮಹಾರಾಷ್ಟ್ರ ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಹುದ್ದೆಯನ್ನು ಶಿಂದೆ ಅವರು ಒಪ್ಪಿಕೊಳ್ಳುವ ಸಾಧ್ಯತೆಯಿಲ್ಲ ಎಂದು ಶಿರ್ಸತ್ ಹೇಳಿದ್ದಾರೆ.
ನವೆಂಬರ್ 20ರಂದು ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ‘ಮಹಾಯುತಿ’ ಮೈತ್ರಿಕೂಟವು 235 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ನೇತೃತ್ವದ ‘ಮಹಾ ವಿಕಾಸ ಅಘಾಡಿ’ ಕೇವಲ 49 ಸ್ಥಾನಗಳನ್ನು ಗಳಿಸಿ ತೀವ್ರ ಮುಖಭಂಗ ಅನುಭವಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.