ADVERTISEMENT

ಗೆಲುವಿಗೆ ಕಾರ್ಯತಂತ್ರ: ಬಿಜೆಪಿ ವರಿಷ್ಠರ ಚರ್ಚೆ

ಒಕ್ಕಲಿಗ, ಲಿಂಗಾಯತ ಮತ ಸೆಳೆಯುವುದು, ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಗುರಿ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2022, 21:08 IST
Last Updated 15 ಡಿಸೆಂಬರ್ 2022, 21:08 IST

ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಇತ್ತೀಚೆಗೆ ಬಿಜೆಪಿಯ ಹಿರಿಯ ಮುಖಂಡ ಸಭೆ ನಡೆದಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಒಕ್ಕಲಿಗ ಹಾಗೂ ಲಿಂಗಾಯತರ ಮತಗಳನ್ನು ಪಡೆಯಲು ಅನುಸರಿಸಬೇಕಾದ ಕಾರ್ಯತಂತ್ರ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.

ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಬಗೆ, ನಳಿನ್‌ಕುಮಾರ್‌ ಕಟೀಲ್ ಅವರನ್ನೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮುಂದುವರಿಸಬೇಕೇ, ಬೇಡವೇ?. ರಾಜ್ಯದ ಮೂಲಕ ಹಾಯ್ದು ಹೋದ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ಪಾಲ್ಗೊಂಡಿದ್ದರ ಬಗ್ಗೆ ಬಿಜೆಪಿ ನಾಯಕರು ಚರ್ಚಿಸಿದರು ಎಂದು ಮೂಲಗಳು ಹೇಳಿವೆ.

ಕರ್ನಾಟಕವಲ್ಲದೇ, ಉತ್ತರ ಪ್ರದೇಶ ಹಾಗೂ ತ್ರಿಪುರಾ ರಾಜ್ಯಗಳಲ್ಲಿನ ಪಕ್ಷದ ಸ್ಥಿತಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಪಕ್ಷದ ರಾಜ್ಯ ಉಸ್ತುವಾರಿಗಳು, ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ಇವೇ ಮೂಲಗಳು ಹೇಳಿವೆ.

ADVERTISEMENT

ಜೆಡಿಎಸ್‌ ಸಖ್ಯ?: ಮುಂಬರುವ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್‌ನ ನಡೆ ಬಗ್ಗೆ ಗಮನವಿರಿಸಬೇಕು ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು ಎನ್ನಲಾಗಿದೆ.

ಗಮನಾರ್ಹವೆಂದರೆ, ಬಿಜೆಪಿ ವರಿಷ್ಠರ ಉಪಸ್ಥಿತಿಯಲ್ಲಿರಾಜ್ಯ ಬಿಜೆಪಿ ನಾಯಕರ ಸಭೆ ನಡೆದ ದಿನವೇ, ಇತ್ತ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಅಂತರರಾಜ್ಯ ನದಿ ವಿವಾದಗಳಲ್ಲಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಹಾಗೂ ಇತರ ವಿಷಯಗಳ ಕುರಿತು ಮೋದಿ ಅವರೊಂದಿಗೆ ದೇವೇಗೌಡ ಚರ್ಚಿಸಿದರು.

ಭಾರತ್‌ ಜೋಡೊ ಯಾತ್ರೆಯು ಕಾಂಗ್ರೆಸ್‌ ಪಾಳೆಯದಲ್ಲಿ ಉತ್ಸಾಹ ತುಂಬಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ, ರಾಹುಲ್‌ ಗಾಂಧಿ ಅವರೊಂದಿಗೆ ಈ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದರು. ಇದು ಉಭಯ ನಾಯಕರು ಒಂದಾಗಿದ್ದಾರೆ ಹಾಗೂ ರಾಜ್ಯ ಕಾಂಗ್ರೆಸ್‌ ಈಗ ಒಡೆದ ಮನೆಯಲ್ಲ ಎಂಬ ಸಂದೇಶವನ್ನು ರವಾನಿಸಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಈ ಎಲ್ಲ ವಿದ್ಯಮಾನಗಳು ಮುಂದಿನ ಚುನಾವಣೆಯಲ್ಲಿ ಬಿಜೆಪಿಯ ಸಾಧನೆ ಮೇಲೆ ಯಾವ ಪರಿಣಾಮ ಬೀರಬಹುದು ಎಂಬ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.