ADVERTISEMENT

ಕೇರಳದಲ್ಲಿ ನಿರಂತರ ಮಳೆ: 5 ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಣೆ

ಪಿಟಿಐ
Published 16 ಅಕ್ಟೋಬರ್ 2021, 9:29 IST
Last Updated 16 ಅಕ್ಟೋಬರ್ 2021, 9:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ತಿರುವನಂತಪುರಂ: ಕೇರಳದ ದಕ್ಷಿಣ ಹಾಗೂ ಮಧ್ಯಭಾಗದ ಜಿಲ್ಲೆಗಳಲ್ಲಿ ಶನಿವಾರ ಭಾರಿ ಮಳೆಯಾದ ಕಾರಣ, ನದಿಗಳು ಉಕ್ಕಿ ಹರಿಯುತ್ತಿವೆ. ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿರುವ ಕಾರಣ ಹವಾಮಾನ ತಜ್ಞರು ರಾಜ್ಯದ ಐದು ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’ ಘೋಷಿಸಿದ್ದಾರೆ.

ಹವಾಮಾನ ಇಲಾಖೆಯ ಇತ್ತೀಚೆಗಿನ ಮಾಹಿತಿ ಪ್ರಕಾರ, ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಅಲಪ್ಪುಳ, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆ ಇರುವ ಕಾರಣ, ಆ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ, ಮುಂದಿನ ಇಪ್ಪತ್ನಾಲ್ಕು ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಸಾರ್ವಜನಿಕರು ಜಾಗರೂಕತೆಯಿಂದ ಇರುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ಈಗಾಗಲೇ ದಕ್ಷಿಣ ಮತ್ತು ಮಧ್ಯ ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಉತ್ತರ ಭಾಗದ ಜಿಲ್ಲೆಗಳಲ್ಲೂ ಇಂದು ಸಂಜೆ ಮಳೆ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಭಾರಿ ಮಳೆಯಾಗುತ್ತಿರುವ ಕಾರಣ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುವ ಸಾಧ್ಯತೆ ಇದೆ. ಕೆಲವು ಅಣೆಕಟ್ಟುಗಳು ತುಂಬಿ ಹರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಲಾಶಯದ ಆಸುಪಾಸಿನಲ್ಲಿ ವಾಸಿಸುತ್ತಿರುವವರು ಅಧಿಕಾರಿಗಳು ನೀಡುವ ಸೂಚನೆಯನ್ನು ಅನುಸರಿಸಲು ಸಿದ್ಧರಿರುವಂತೆ ಮುಖ್ಯಮಂತ್ರಿ ತಿಳಿಸಿದ್ದಾರೆ.

ತಿರುವನಂತಪುರ ಜಿಲ್ಲೆಯ ಚೆಂಪಕಮಂಗಲದಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ, ಮನೆಯೊಂದರ ಗೋಡೆ ಕುಸಿದಿದೆ. ಮನೆಯೊಳಗಿದ್ದ ಇಬ್ಬರು ಮಕ್ಕಳು ಪವಾಡಸದೃಶವಾಗಿ ಪಾರಾಗಿದ್ದಾರೆ. ಮಕ್ಕಳು ಮಲಗಿದ್ದ ಹಾಸಿಗೆಯ ಮೇಲೆ ಗೋಡೆ ಕುಸಿದಿದ್ದರೂ, ಮಕ್ಕಳಿಗೆ ಯಾವುದೇ ತೊಂದರೆಯಾಗಿಲ್ಲ. ‘ಸಣ್ಣಪುಟ್ಟ ಗಾಯಗಳೊಂದಿಗೆ ಮಕ್ಕಳು ಪಾರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.