ಭಾರತ ಮತ್ತು ಪಾಕಿಸ್ತಾನ
(ಐಸ್ಟೋಕ್ ಸಂಗ್ರಹ ಚಿತ್ರ)
ನವದೆಹಲಿ: ಭಾರತದ ವಿರುದ್ಧ ಸೇನಾ ಕಾರ್ಯಾಚರಣೆ ಆರಂಭಿಸಿರುವ ಪಾಕಿಸ್ತಾನ, ಗಡಿಯುದ್ದಕ್ಕೂ ಸೈನಿಕರ ನಿಯೋಜನೆಯನ್ನು ಹೆಚ್ಚಿಸುತ್ತಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಪಾಕಿಸ್ತಾನದ ಈ ನಡೆಯಿಂದ ಸಂಘರ್ಷ ತಾರಕಕ್ಕೇರಿದೆ.
ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರು ಇಂದು (ಶನಿವಾರ, ಮೇ 10) ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಸಂಘರ್ಷದ ಕುರಿತು ಮಾಹಿತಿ ನೀಡಿದ್ದಾರೆ.
ಪಾಕಿಸ್ತಾನ ನಡೆಸುತ್ತಿರುವ ಕೃತ್ಯಗಳು ಪ್ರಚೋದನಾಕಾರಿಯಾಗಿದ್ದು, ಉದ್ವಿಗ್ನತೆಗೆ ಕಾರಣವಾಗಿವೆ ಎಂದು ವಿಕ್ರಮ್ ಮಿಶ್ರಿ ಹೇಳಿದ್ದಾರೆ.
'ಪಾಕ್ ಸೇನೆಯು ಹೆಚ್ಚಿನ ಸೈನಿಕರನ್ನು ನಿಯೋಜಿಸುತ್ತಿದೆ. ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸುವ ಉದ್ದೇಶವನ್ನು ಪಾಕಿಸ್ತಾನ ಹೊಂದಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ' ಎಂದು ಕರ್ನಲ್ ಸೋಫಿಯಾ ಖುರೇಷಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ.
'ಭಾರತೀಯ ಸಶಸ್ತ್ರ ಪಡೆಗಳು ಕಾರ್ಯಾಚರಣೆಗೆ ಸನ್ನದ್ಧವಾಗಿವೆ. ಆದಾಗ್ಯೂ, ಉದ್ವಿಗ್ನತೆ ನಿವಾರಣೆಗೆ ಬದ್ಧವಾಗಿವೆ. ಪಾಕ್ ಪಡೆಗಳು ದಾಳಿ ನಡೆಸಿದರೆ ತಕ್ಕ ಉತ್ತರ ನೀಡಲಾಗುವುದು' ಎಂದು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಎಚ್ಚರಿಸಿದ್ದಾರೆ.
ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆ, ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿ (ಮೇ 7ರಂದು) 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು. ಇದರ ಬೆನ್ನಲ್ಲೇ, ಪಾಕ್ ಪಡೆಗಳು ಗಡಿಯಲ್ಲಿ ಡ್ರೋನ್ ಹಾಗೂ ಕ್ಷಿಪಣಿ ದಾಳಿ ನಡೆಸುತ್ತಿವೆ. ಅವನ್ನು ಭಾರತೀಯ ಸೇನೆ ಸಮರ್ಥವಾಗಿ ಹಿಮ್ಮೆಟ್ಟಿಸುತ್ತಿದೆ.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ದಾಳಿ ನಡೆದಿತ್ತು. 26 ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.