ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿ, ಆಪರೇಷನ್ ಸಿಂಧೂರ ಮತ್ತು ಆ ಬಳಿಕದ ಬೆಳವಣಿಗೆಗಳ ಕುರಿತು ಚರ್ಚಿಸಲು ಸಂಸತ್ತಿನ ವಿಶೇಷ ಅಧಿವೇಶನವನ್ನು ತಕ್ಷಣ ಕರೆಯುವಂತೆ ‘ಇಂಡಿಯಾ’ ಮೈತ್ರಿಕೂಟದ 16 ಪಕ್ಷಗಳ ನಾಯಕರು ಪ್ರಧಾನಿ ಅವರನ್ನು ಒತ್ತಾಯಿಸಿದ್ದಾರೆ.
ರಾಹುಲ್ ಗಾಂಧಿ, ಅಖಿಲೇಶ್ ಯಾದವ್ ಮತ್ತು ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಂಟಿಯಾಗಿ ಪತ್ರ ಬರೆದಿದ್ದಾರೆ.
ಮೈತ್ರಿಕೂಟದ ಐದು ಪ್ರಮುಖ ಪಕ್ಷಗಳ ನಾಯಕರು ಮಂಗಳವಾರ ಇಲ್ಲಿ ಸಭೆ ನಡೆಸಿದ ಬಳಿಕ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಜತೆಗಿನ ಭಿನ್ನಾಭಿಪ್ರಾಯದಿಂದಾಗಿ ಎಎಪಿಯು ಸಭೆಯಲ್ಲಿ ಪಾಲ್ಗೊಳ್ಳಲಿಲ್ಲ. ಆದರೆ ವಿಶೇಷ ಅಧಿವೇಶನಕ್ಕೆ ಒತ್ತಾಯಿಸಿ ಪ್ರಧಾನಿ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆಯಲು ನಿರ್ಧರಿಸಿದೆ.
ಇಂತಹ ‘ಸೂಕ್ಷ್ಮ’ ವಿಷಯದ ಕುರಿತು ವಿಶೇಷ ಅಧಿವೇಶನ ನಡೆಸಲು ಎನ್‌ಸಿಪಿ (ಎಸ್‌ಪಿ) ಆಕ್ಷೇಪ ವ್ಯಕ್ತಪಡಿಸಿದೆ. ಇದರಿಂದ ‘ಇಂಡಿಯಾ’ ಬಣದೊಳಗಿನ ಭಿನ್ನಾಭಿಪ್ರಾಯ ಬಹಿರಂಗವಾಗಿದೆ.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್, ಶಿವಸೇನಾ (ಯುಬಿಟಿ) ನಾಯಕ ಅರವಿಂದ ಸಾವಂತ್ ಹಾಗೂ ಡಿಎಂಕೆಯ ಟಿ.ಆರ್.ಬಾಲು ಅವರು ಪತ್ರಕ್ಕೆ ಸಹಿ ಹಾಕಿದ ನಾಯಕರಲ್ಲಿ ಸೇರಿದ್ದಾರೆ.
ಆರ್‌ಜೆಡಿ, ನ್ಯಾಷನಲ್ ಕಾನ್ಫರೆನ್ಸ್, ಸಿಪಿಎಂ, ಸಿಪಿಐ, ಆರ್‌ಎಸ್‌ಪಿ, ಮುಸ್ಲಿಮ್ ಲೀಗ್, ಜೆಎಂಎಂ ಮತ್ತು ಕೇರಳ ಕಾಂಗ್ರೆಸ್ ಪಕ್ಷಗಳ ನಾಯಕರೂ ಸಹಿ ಹಾಕಿದ್ದಾರೆ.
ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷಗಳ ಸಂಸದರು ವಿಶೇಷ ಅಧಿವೇಶನಕ್ಕೆ ಒತ್ತಾಯಿಸಿ ಪ್ರಧಾನಿಗೆ ಪ್ರತ್ಯೇಕ ಪತ್ರವನ್ನು ಕಳುಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.