ADVERTISEMENT

Ind-Pak Tensions: ಸಂಪಾದಕರನ್ನು ಭೇಟಿಯಾಗಿ ವಾಸ್ತವ ವರದಿ ಪ್ರಕಟಿಸಿ ಎಂದ ಸಚಿವ

ಪಿಟಿಐ
Published 10 ಮೇ 2025, 2:23 IST
Last Updated 10 ಮೇ 2025, 2:23 IST
ಪತ್ರಿಕೋದ್ಯಮ
ಪತ್ರಿಕೋದ್ಯಮ   

ನವದೆಹಲಿ: ಮಾಧ್ಯಮ ಪ್ರತಿನಿಧಿಗಳನ್ನು ಶುಕ್ರವಾರ ಭೇಟಿಯಾಗಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್‌, ಭಾರತ ಹಾಗೂ ಪಾಕಿಸ್ತಾನ ನಡುವಣ ಸೇನಾ ಸಂಘರ್ಷದ ಸಂದರ್ಭದಲ್ಲಿ ವಾಸ್ತವ ವರದಿಗಳನ್ನು ಪ್ರಕಟಿಸುವಂತೆ ಮನವಿ ಮಾಡಿದ್ದಾರೆ. ಇದೇ ವೇಳೆ ಅವರು, ಜವಾಬ್ದಾರಿಯುತ ವರದಿಗಾರಿಕೆಯ ಮಹತ್ವವನ್ನು ಪ್ರತಿಪಾದಿಸಿದ್ದಾರೆ.

ಮುದ್ರಣ ಮಾಧ್ಯಮಗಳ ಸಂಪಾದಕರೊಂದಿಗೆ ಸಂವಹನ ನಡೆಸಿರುವ ವೈಷ್ಣವ್‌, ಸಂಘರ್ಷಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಪ್ರಕಟಿಸುವುದಕ್ಕೂ ಮುನ್ನ ಮಾಹಿತಿಯನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಹಾಗೂ ಭದ್ರತಾ ಪಡೆಗಳ ಚಲನವಲನಗಳ ನೇರ ಪ್ರಸಾರ ಮಾಡುವುದನ್ನು ವಿದ್ಯುನ್ಮಾನ ಮಾಧ್ಯಮಗಳು ನಿಲ್ಲಿಸಬೇಕು. ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

ADVERTISEMENT

ಭಾರತೀಯ ಸಶಸ್ತ್ರ ಪಡೆಗಳು ತೆಗೆದುಕೊಂಡಿರುವ ಕ್ರಮವು, ಭಯೋತ್ಪಾದನೆ ವಿರುದ್ಧವೇ ಹೊರತು ಯಾವುದೇ ದೇಶ ಅಥವಾ ಸಮುದಾಯದ ವಿರುದ್ಧವಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಉಗ್ರರು ಏಪ್ರಿಲ್ 22 ರಂದು ಗುಂಡಿನ ದಾಳಿ ನಡೆಸಿದ್ದರು. ಆ ವೇಳೆ 26 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಮೇ 7ರಂದು 'ಆಪರೇಷನ್‌ ಸಿಂಧೂರ' ಕಾರ್ಯಾಚರಣೆ ನಡೆಸಿತ್ತು.

ಇದೀಗ ಪಾಕ್‌ ಸೇನಯು ಗಡಿಯಲ್ಲಿ ನಾಗರಿಕರು ಹಾಗೂ ಸೇನಾ ನೆಲೆಗಳನ್ನು ಗುರಿಯಾಗಿಸಿ ಶೆಲ್‌ ಹಾಗೂ ಕ್ಷಿಪಣಿ ದಾಳಿ ನಡೆಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಿದೆ. ಪಾಕ್‌ ದಾಳಿಯನ್ನು ಭಾರತೀಯ ಸೇನೆ, ಸಮರ್ಥವಾಗಿ ಹಿಮ್ಮೆಟ್ಟಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.