ADVERTISEMENT

India-Pak Tensions | ಪಾಕ್ ದಾಳಿಯಲ್ಲಿ ಗಾಯಗೊಂಡಿದ್ದ ಪಂಜಾಬ್ ಮಹಿಳೆ ಸಾವು

ಪಿಟಿಐ
Published 13 ಮೇ 2025, 10:03 IST
Last Updated 13 ಮೇ 2025, 10:03 IST
<div class="paragraphs"><p>ಮಹಿಳೆ ಸಾವು</p></div>

ಮಹಿಳೆ ಸಾವು

   

(ಪ್ರಾತಿನಿಧಿಕ ಚಿತ್ರ)

ಲುಧಿಯಾನ: ಪಂಜಾಬ್‌ನ ಫಿರೋಜ್‌ಪುರದಲ್ಲಿ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ 50 ವರ್ಷದ ಮಹಿಳೆಯೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪಾಕಿಸ್ತಾನ ವೈಮಾನಿಕ ದಾಳಿ ನಡೆಸಿದ ಸಂದರ್ಭದಲ್ಲಿ ಸುಖ್ವಿಂದರ್ ಕೌರ್ ಎಂಬುವರ ಮನೆಯ ಮೇಲೆ ಕೆಲವು ಅವಶೇಷಗಳು ಬಿದ್ದಿದ್ದವು. ಇದರ ಪರಿಣಾಮವಾಗಿ ಮನೆ ಮತ್ತು ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಇದೇ ವೇಳೆ ಕೌರ್ ಸೇರಿದಂತೆ ಅವರ ಪತಿ ಲಖ್ವಿಂದರ್ ಸಿಂಗ್ (55) ಮತ್ತು ಅವರ ಮಗ ಮೋನು ಸಿಂಗ್ (24) ಗಂಭೀರವಾಗಿ ಗಾಯಗೊಂಡಿದ್ದರು.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಸುಖ್ವಿಂದರ್ ಕೌರ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಜತೆಗೆ, ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ರಾಜ್ಯಸಭಾ ಸಂಸದ ಸಂಜೀವ್ ಅರೋರಾ ಅವರು, ಕೌರ್ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತದ ಸಶಸ್ತ್ರ ಪಡೆಗಳು ‘ಆಪರೇಷನ್‌ ಸಿಂಧೂರ’ದ ಮೂಲಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಗಡಿಯಲ್ಲಿ ಎರಡೂ ದೇಶಗಳ ನಡುವೆ ಸೇನಾ ಸಂಘರ್ಷ ತೀವ್ರಗೊಂಡಿದೆ.

ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ಗುಜರಾತ್‌ ಸೇರಿದಂತೆ ಪಶ್ಚಿಮ ಭಾರತದ ಗಡಿಗಳಲ್ಲಿ 25ಕ್ಕೂ ಹೆಚ್ಚು ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಶುಕ್ರವಾರ ರಾತ್ರಿ ಡ್ರೋನ್ ದಾಳಿ ನಡೆಸಿತ್ತು. ವಿಮಾನ ನಿಲ್ದಾಣಗಳು, ವಾಯುನೆಲೆಗಳು ಸೇರಿದಂತೆ ಪ್ರಮುಖ ಕಟ್ಟಡಗಳನ್ನು ಹೊಡೆಯುವ ಶತ್ರುಗಳ ಪ್ರಯತ್ನಗಳನ್ನು ವಿಫಲಗೊಳಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.