ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್
(ಪಿಟಿಐ ಚಿತ್ರ)
ನವದೆಹಲಿ: ತಮ್ಮ 75ನೇ ಹುಟ್ಟುಹಬ್ಬಕ್ಕೆ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದಗಳನ್ನು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಭಾರತ ಮತ್ತು ಅಮೆರಿಕ ಸಮಗ್ರ ಹಾಗೂ ಜಾಗತಿಕ ಸಹಭಾಗಿತ್ವವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಸಂಪೂರ್ಣ ಬದ್ಧರಾಗಿರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಟ್ರಂಪ್ ಅವರಿಗೆ ಧನ್ಯವಾದ ಸಲ್ಲಿಸಿರುವ ಪ್ರಧಾನಿ ಮೋದಿ, ಉಕ್ರೇನ್ ಸಂಘರ್ಷದಲ್ಲಿ ಶಾಂತಿ ನೆಲೆಸಲು ಟ್ರಂಪ್ ಅವರ ಪ್ರಯತ್ನವನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.
ಈ ಮೊದಲು ಭಾರತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ರಷ್ಯಾ ಹಾಗೂ ಉಕ್ರೇನ್ ನಡುವಣ ಯುದ್ಧ ಕೊನೆಗೊಳಿಸಲು ಪ್ರಧಾನಿ ಮೋದಿ ಅವರ ಬೆಂಬಲಕ್ಕೆ ಟ್ರಂಪ್ ಧನ್ಯವಾದಗಳನ್ನು ಸಲ್ಲಿಸಿದರು.
ನರೇಂದ್ರ ಮೋದಿ ಹಾಗೂ ಡೊನಾಲ್ಡ್ ಟ್ರಂಪ್ ಪರಸ್ಪರ 'ಮಿತ್ರ' ಎಂದು ಸಂಭೋದಿಸಿದ್ದಾರೆ.
ಅಮೆರಿಕವು ಭಾರತದ ಸರಕುಗಳ ಮೇಲೆ ಶೇಕಡ 50ರಷ್ಟು ಸುಂಕ ವಿಧಿಸಿತ್ತು. ಪ್ರತಿಸುಂಕದ ರೂಪದಲ್ಲಿ ಶೇ 25ರಷ್ಟು ತೆರಿಗೆ ಹಾಗೂ ರಷ್ಯಾದಿಂದ ಕಚ್ಚಾ ತೈಲ ಖರೀದಿಸುತ್ತಿರುವುದಕ್ಕಾಗಿ ಶೇ 25ರಷ್ಟು ಹೆಚ್ಚುವರಿ ತೆರಿಗೆ ವಿಧಿಸಿತ್ತು. ಇದರಿಂದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಮೇಲೆ ಪರಿಣಾಮ ಬೀರಿತ್ತು.
ಅದಾದ ಬಳಿಕ ಟ್ರಂಪ್ ಸಕಾರಾತ್ಮಕ ಮಾತುಕಗಳನ್ನಾಡಿದ್ದರು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ಭಾರತ ಹಾಗೂ ಅಮೆರಿಕ ನಡುವ ದ್ವಿಪಕ್ಷೀಯ ವ್ಯಾಪಾರ ಒಪ್ಪಂದ ಸಂಬಂಧ ಮಾತುಕತೆ ಮಂಗಳವಾರ (ಸೆ. 16) ಪುನರಾರಂಭಗೊಂಡಿದೆ. ಈ ಮಾತುಕತೆಯು ಸಕಾರಾತ್ಮಕವಾಗಿ ಇತ್ತು ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.