ಪಾಕಿಸ್ತಾನದ ಡ್ರೋನ್‌ಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ
ನವದೆಹಲಿ: ಪಶ್ಚಿಮ ಗಡಿಗಳಲ್ಲಿ ಪಾಕಿಸ್ತಾನದ ಡ್ರೋನ್ ದಾಳಿಯನ್ನು ವಿಫಲಗೊಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನವು ಡ್ರೋನ್ ದಾಳಿ ಮತ್ತು ಯುದ್ಧಸಾಮಗ್ರಿಗಳೊಂದಿಗೆ ಪರಿಸ್ಥಿತಿಯನ್ನು ಉಲ್ಬಣಗೊಳಿಸುವುದನ್ನು ಮುಂದುವರೆಸಿದೆ ಎಂದು ರಕ್ಷಣಾ ಸಚಿವಾಲಯ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.
ಇಂದು (ಶನಿವಾರ) ಬೆಳಿಗ್ಗೆ 5 ಗಂಟೆ ಸುಮಾರಿಗೆ ಪಂಜಾಬ್‌ನ ಅಮೃತಸರದ ಹಲವಡೆ ಪಾಕಿಸ್ತಾನದ ಶಸ್ತ್ರಸಜ್ಜಿತ ಡ್ರೋನ್‌ಗಳು ಪತ್ತೆಯಾಗಿದ್ದು, ಅವುಗಳನ್ನು ನಮ್ಮ ವಾಯು ರಕ್ಷಣಾ ಘಟಕಗಳು ನಾಶಪಡಿಸಿವೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.
ಭಾರತದ ಸಾರ್ವಭೌಮತ್ವವನ್ನು ಉಲ್ಲಂಘಿಸುವ ಮತ್ತು ನಾಗರಿಕ ಜೀವಗಳಿಗೆ ಅಪಾಯವನ್ನುಂಟು ಮಾಡುವ ಪಾಕಿಸ್ತಾನದ ನಡೆ ಖಂಡನಾರ್ಹ ಎಂದು ರಕ್ಷಣಾ ಸಚಿವಾಲಯ ಎಚ್ಚರಿಕೆ ನೀಡಿದೆ.
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತದ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ’ದ ಮೂಲಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಗಡಿಯಲ್ಲಿ ಎರಡೂ ದೇಶಗಳ ನಡುವೆ ಸೇನಾ ಸಂಘರ್ಷ ತೀವ್ರಗೊಂಡಿದೆ.
ಜಮ್ಮು ಮತ್ತು ಕಾಶ್ಮೀರದಿಂದ ಗುಜರಾತ್‌ವರೆಗಿನ ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಶುಕ್ರವಾರ ರಾತ್ರಿ ಡ್ರೋನ್ ದಾಳಿ ನಡೆಸಿದೆ. ವಿಮಾನ ನಿಲ್ದಾಣಗಳು, ವಾಯುನೆಲೆಗಳು ಸೇರಿದಂತೆ ಪ್ರಮುಖ ಕಟ್ಟಡಗಳನ್ನು ಹೊಡೆಯುವ ಶತ್ರುಗಳ ಪ್ರಯತ್ನಗಳನ್ನು ವಿಫಲಗೊಳಿಸಲಾಗಿದೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ.
ಪಾಕಿಸ್ತಾನದೊಂದಿಗಿನ ಅಂತರರಾಷ್ಟ್ರೀಯ ಗಡಿ ಮತ್ತು ಎಲ್‌ಒಸಿಯ ಬಾರಾಮುಲ್ಲಾ, ಶ್ರೀನಗರ, ಅವಂತಿಪುರ, ಜಮ್ಮು, ಫಿರೋಜ್‌ಪುರ, ಪಠಾಣ್‌ಕೋಟ್, ಫಜಿಲ್ಕಾ, ಲಾಲ್‌ಗಢ್ ಜಟ್ಟಾ, ಜೈಸಲ್ಮೇರ್, ಬಾರ್ಮರ್, ಭುಜ್, ಕುವಾರ್ಬೆಟ್ ಮತ್ತು ಲಖಿ ನಲಾ ಸೇರಿದಂತೆ ಒಟ್ಟು 26 ಸ್ಥಳಗಳಲ್ಲಿ ಡ್ರೋನ್‌ಗಳು ಪತ್ತೆಯಾಗಿವೆ. ಇವುಗಳಲ್ಲಿ ಶಂಕಿತ ಶಸ್ತ್ರಸಜ್ಜಿತ ಡ್ರೋನ್‌ಗಳು ಸೇರಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಫಿರೋಜ್‌ಪುರದ ನಾಗರಿಕ ಪ್ರದೇಶವನ್ನು ಗುರಿಯಾಗಿಸಿಕೊಂಡು ಡ್ರೋನ್ ಹಾರಿಸಲಾಗಿದ್ದು, ಸ್ಥಳೀಯ ಕುಟುಂಬದ ಸದಸ್ಯರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವೈದ್ಯಕೀಯ ನೆರವು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿ ಪ್ರದೇಶಗಳಲ್ಲಿ ನಾಗರಿಕರು ಮನೆಯೊಳಗೆ ಇರಬೇಕು. ಅನಗತ್ಯವಾಗಿ ಹೊರಗಡೆ ಓಡಾಡಬಾರದು. ಹಾಗೆಯೇ, ಸುರಕ್ಷತಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.