ನವದೆಹಲಿ: ‘ಜಗದೀಪ್ ಧನಕರ್ ಅವರು ಉಪರಾಷ್ಟ್ರಪತಿ ಹುದ್ದೆಗೆ ದಿಢೀರ್ ರಾಜೀನಾಮೆ ಸಲ್ಲಿಸುವ ಮುನ್ನ ಸೋಮವಾರ ರಾತ್ರಿ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿದ್ದರು’ ಎಂದು ಅಧಿಕೃತ ಮೂಲಗಳು ಖಚಿತಪಡಿಸಿವೆ.
‘ಧನಕರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೋಮವಾರ ರಾತ್ರಿ 9 ಗಂಟೆ ವೇಳೆಗೆ ಭೇಟಿಯಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಇದಾದ ಅರ್ಧ ಗಂಟೆಯ ಬಳಿಕ ತಮ್ಮ ರಾಜೀನಾಮೆ ಪತ್ರವನ್ನು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಬಹಿರಂಗಪಡಿಸಿದರು’ ಎಂದು ಮೂಲಗಳು ತಿಳಿಸಿವೆ.
‘ಆರೋಗ್ಯದ ಮೇಲೆ ಹೆಚ್ಚಿನ ಗಮನಹರಿಸಲು ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿ, ತಕ್ಷಣವೇ ಜಾರಿಗೆ ಬರುವಂತೆ ಭಾರತದ ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ರಾಷ್ಟ್ರಪತಿ ಅವರಿಗೆ ಬರೆದ ಪತ್ರದಲ್ಲಿ ಜಗದೀಪ್ ಧನಕರ್ ತಿಳಿಸಿದ್ದರು.
74 ವರ್ಷದ ಧನಕರ್ ಅವರು 2022ರ ಆಗಸ್ಟ್‌ನಲ್ಲಿ ಉಪರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದು, ಅವರ ಅವಧಿ 2027ಕ್ಕೆ ಕೊನೆಗೊಳ್ಳುತ್ತಿತ್ತು. ರಾಜಸಭೆಯ ಅಧ್ಯಕ್ಷರಾಗಿದ್ದ ಧನಕರ್ ಅವರು ಸಂಸತ್‌ನ ಮಳೆಗಾಲದ ಅಧಿವೇಶನದ ಮೊದಲ ದಿನ ಭಾಗವಹಿಸಿ, ನಂತರ ರಾಜೀನಾಮೆ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.