
ಇಂಡಿಗೊ ವಿಮಾನಗಳು (ಸಾಂದರ್ಭಿಕ ಚಿತ್ರ)
ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆ ಸವಾಲು ಮತ್ತು ತಾಂತ್ರಿಕ ಕಾರಣಗಳಿಂದಾಗಿ ಗುರುವಾರ 73 ಇಂಡಿಗೊ ವಿಮಾನಗಳ ಹಾರಾಟ ರದ್ದಾಗಿದೆ ಎಂದು ವರದಿಯಾಗಿದೆ.
ಬುಧವಾರ ಬೆಂಗಳೂರು ಸೇರಿದಂತೆ ದೇಶದಾದ್ಯಂತ ಕನಿಷ್ಠ 150 ಇಂಡಿಗೊ ವಿಮಾನಗಳ ಹಾರಾಟ ರದ್ದಾಗಿತ್ತು. ಇದರಿಂದಾಗಿ ವಿವಿಧೆಡೆ ತೆರಳಲು ಸಿದ್ಧರಾಗಿದ್ದ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣಗಳಲ್ಲಿ ಗಂಟೆಗಟ್ಟಲೆ ಕಾಯುವ ಅನಿವಾರ್ಯತೆಗೆ ಸಿಲುಕಿದ್ದರು.
ಇಂದು (ಗುರುವಾರ) ಹೈದರಾಬಾದ್‌ನಿಂದ ಹೊರಡಬೇಕಿದ್ದ 33 ಇಂಡಿಗೊ ವಿಮಾನಗಳು ರದ್ದಾಗಿವೆ ಎಂದು ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ವಿಮಾನಗಳ ಸಂಚಾರ ರದ್ದಾಗಿದ್ದರಿಂದ ಸಿಟ್ಟಿಗೆದ್ದ ಪ್ರಯಾಣಿಕರು ವಿವಿಧ ವಿಮಾನ ನಿಲ್ದಾಣಗಳಲ್ಲಿ ಇಂಡಿಗೊ ಕಂಪನಿಯ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ. ಸಿಬ್ಬಂದಿ ಮತ್ತು ಪ್ರಯಾಣಿಕರ ನಡುವೆ ಜಟಾಪಟಿ ನಡೆದಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.
ಇಂಡಿಗೊ ವಿಮಾನಗಳ ಸಂಚಾರ ರದ್ದುಗೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ) ತನಿಖೆಗೆ ನಿರ್ದೇಶಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.