ಘಟನೆಯ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.
Credit: X
ನವದೆಹಲಿ: ಮುಂಬೈನಿಂದ ಕೋಲ್ಕತ್ತಕ್ಕೆ ಬರುತ್ತಿದ್ದ ಇಂಡಿಗೊ ವಿಮಾನದಲ್ಲಿ ಪ್ರಯಾಣಿಕನೊಬ್ಬ, ಸಹ ಪ್ರಯಾಣಿಕನ ಕೆನ್ನೆಗೆ ಹೊಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇಂಡಿಗೊ 6ಇ138 ವಿಮಾನವು, ಕೋಲ್ಕತ್ತ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ವೇಳೆ ಘಟನೆ ನಡೆದಿದೆ. ಪ್ರಯಾಣಿಕ ದಿಢೀರನೆ ಸಹ ಪ್ರಯಾಣಿಕನ ಕೆನ್ನೆಗೆ ಹೊಡೆದಿದ್ದಾರೆ. ಇಂಡಿಗೊ ವಿಮಾನದ ಕ್ಯಾಬಿನ್ ಸಿಬ್ಬಂದಿ, ಸಹ ಪ್ರಯಾಣಿಕರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಕೆನ್ನೆಗೆ ಹೊಡೆಯಲು ಕಾರಣವೇನು ಎನ್ನುವುದು ತಿಳಿದುಬಂದಿಲ್ಲ.
'ನಮ್ಮ ವಿಮಾನವೊಂದರಲ್ಲಿ ದೈಹಿಕ ಹಲ್ಲೆಗೆ ಸಂಬಂಧಿಸಿದ ಘಟನೆ ನಡೆದಿರುವುದು ಗಮನಕ್ಕೆ ಬಂದಿದೆ. ಇಂತಹ ಅಶಿಸ್ತಿನ ನಡವಳಿಕೆಯು ಸ್ವೀಕಾರಾರ್ಹವಲ್ಲ. ಪ್ರಯಾಣಿಕರು, ಸಿಬ್ಬಂದಿಯ ಸುರಕ್ಷತೆ ಮತ್ತು ಘನತೆಗೆ ಧಕ್ಕೆ ತರುವ ಯಾವುದೇ ಕ್ರಮಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ’ ಎಂದು ಇಂಡಿಗೊ ವಿಮಾನಯಾನ ಸಂಸ್ಥೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.
‘ನಮ್ಮ ಸಿಬ್ಬಂದಿ ಕಾರ್ಯವಿಧಾನಗಳಿಗೆ ಅನುಸಾರವಾಗಿ ಕೆಲಸ ಮಾಡಿದ್ದಾರೆ. ಕೃತ್ಯ ಎಸಗಿದ ಆರೋಪಿಯನ್ನು ‘ಅಶಿಸ್ತಿನ ವ್ಯಕ್ತಿ’ ಎಂದು ಘೋಷಿಸಲಾಗಿದೆ. ಜತೆಗೆ, ಆರೋಪಿಯನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ವಶಕ್ಕೆ ಒಪ್ಪಿಸಲಾಗಿದೆ. ನಮ್ಮ ಎಲ್ಲಾ ವಿಮಾನಗಳಲ್ಲಿ ಸುರಕ್ಷಿತ ಮತ್ತು ಗೌರವಾನ್ವಿತ ವಾತಾವರಣವನ್ನು ಕಾಪಾಡಿಕೊಳ್ಳಲು ನಾವು ಬದ್ಧರಾಗಿದ್ದೇವೆ’ ಎಂದು ಇಂಡಿಗೊ ವಿಮಾನಯಾನ ಸಂಸ್ಥೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.