ಭಾರತಕ್ಕೆ ಆಗಮಿಸಿದ ಇಂಡೋನೇಷ್ಯಾ ಅಧ್ಯಕ್ಷ ಸುಬಿಯಾಂಟೊ
(ಚಿತ್ರ ಕೃಪೆ– MEAIndia)
ನವದೆಹಲಿ: ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರು ಗುರುವಾರ ರಾತ್ರಿ ಭಾರತಕ್ಕೆ ಆಗಮಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಪಬಿತ್ರಾ ಮಾರ್ಗರಿಟಾ ಅವರು ವಿಮಾನ ನಿಲ್ದಾಣದಲ್ಲಿ ಅವರನ್ನು ಸ್ವಾಗತಿಸಿದರು.
ಜನವರಿ 26ರಂದು 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸುಬಿಯಾಂಟೊ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಇವರು ಅಧ್ಯಕ್ಷರಾದ ಬಳಿಕ ಅವರ ಮೊದಲ ಭಾರತ ಪ್ರವಾಸ ಇದಾಗಿದೆ.
ಅಧ್ಯಕ್ಷರಾದ ಬಳಿಕ ಭಾರತಕ್ಕೆ ಆಗಮಿಸಿರುವ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರಿಗೆ ಆತ್ಮೀಯ ಸ್ವಾಗತ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ 'ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಭೇಟಿಯು ಭಾರತ -ಇಂಡೋನೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದೂ ಅವರು ಹೇಳಿದ್ದಾರೆ.
ಸುಬಿಯಾಂಟೊ ಅವರು ಭಾರತದ ಗಣರಾಜ್ಯೋತ್ಸವದಲ್ಲಿ ಭಾಗವಹಿಸುತ್ತಿರುವ ಇಂಡೋನೇಷ್ಯಾದ ನಾಲ್ಕನೇ ಅಧ್ಯಕ್ಷರಾಗಿದ್ದಾರೆ. ದೇಶದ(ಇಂಡೋನೇಷ್ಯಾದ) ಮೊದಲ ಅಧ್ಯಕ್ಷರಾದ ಸುಕರ್ನೊ ಅವರು 1950ರಲ್ಲಿ ಭಾರತದ ಮೊದಲ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು.
ಪ್ರತಿ ವರ್ಷ ಭಾರತ ಗಣರಾಜ್ಯೋತ್ಸವ ಆಚರಣೆಗೆ ಜಾಗತಿಕ ನಾಯಕರನ್ನು ಆಹ್ವಾನಿಸುತ್ತದೆ. 2024ರಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು. 2023ರಲ್ಲಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್–ಸಿಸಿ ಅವರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು.
2021 ಮತ್ತು 2022ರಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವಕ್ಕೆ ಭಾರತ ಸರ್ಕಾರ ಅತಿಥಿಗಳನ್ನು ಆಹ್ವಾನಿಸಿರಲಿಲ್ಲ.
2020ರಲ್ಲಿ ಬ್ರೆಜಿಲ್ ಅಧ್ಯಕ್ಷ, 2019ರಲ್ಲಿ ದಕ್ಷಿಣ ಆಫ್ರಿಕಾ ಅಧ್ಯಕ್ಷ, 2018ರಲ್ಲಿ 10 ಆಸಿಯನ್ ದೇಶಗಳ ನಾಯಕರು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.