ರಣಧೀರ್ ಜೈಸ್ವಾಲ್
(ಚಿತ್ರಕೃಪೆ: X/@MEAIndia)
ನವದೆಹಲಿ: ಬಾಂಗ್ಲಾದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದ ಘಟನೆಗಳ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿರುವ ಭಾರತ, ಎಲ್ಲಾ ಅಲ್ಪಸಂಖ್ಯಾತರಿಗೆ ರಕ್ಷಣೆ ಒದಗಿಸುವುದು ಅಲ್ಲಿನ ಮಧ್ಯಂತರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಶುಕ್ರವಾರ ಹೇಳಿದೆ.
ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರು ಎದುರಿಸುತ್ತಿರುವ ಬೆದರಿಕೆಗಳು ಹಾಗೂ ಅವರ ಮೇಲಿನ ‘ಉದ್ದೇಶಿತ ದಾಳಿ’ಯನ್ನು ಭಾರತವು ಬಾಂಗ್ಲಾದೇಶದ ಸರ್ಕಾರದೊಂದಿಗೆ ನಿರಂತರವಾಗಿ ಪ್ರಸ್ತಾಪಿಸುತ್ತಾ ಬಂದಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
‘ಈ ವಿಷಯದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಮಧ್ಯಂತರ ಸರ್ಕಾರವು ಎಲ್ಲಾ ಅಲ್ಪಸಂಖ್ಯಾತರನ್ನು ರಕ್ಷಿಸುವ ಜವಾಬ್ದಾರಿಯನ್ನು ನಿಭಾಯಿಸಬೇಕು’ ಎಂದಿದ್ದಾರೆ.
‘ಹಿಂಸಾಚಾರ ಮತ್ತು ಅಲ್ಪಸಂಖ್ಯಾತರನ್ನು ಪ್ರಚೋದಿಸುವ ಘಟನೆಗಳು ಹೆಚ್ಚುತ್ತಿರುವುದು ಕಳವಳ ಉಂಟುಮಾಡಿದೆ. ಅಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಮಾಧ್ಯಮಗಳ ಉತ್ಪ್ರೇಕ್ಷೆ ಎಂದು ತಳ್ಳಿಹಾಕಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
‘ಸಮ್ಮಿಲಿತ್ ಸನಾತನಿ ಜಾಗರಣ ಜೋತೆ’ ಹಿಂದೂ ಸಂಘಟನೆಯ ಮುಖಂಡ ಚಿನ್ಮಯಿ ಕೃಷ್ಣದಾಸ್ ಬ್ರಹ್ಮಚಾರಿ ಅವರ ಬಂಧನದ ಕುರಿತು ಪ್ರತಿಕ್ರಿಯಿಸಿ, ‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆ ನಡೆಯುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ವಿಚಾರಣೆ ಪ್ರಕ್ರಿಯೆ ನ್ಯಾಯಯುತ ಮತ್ತು ಪಾರದರ್ಶಕವಾಗಿ ನಡೆಯಲಿದೆ ಎಂದು ನಿರೀಕ್ಷಿಸುತ್ತೇವೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.