ADVERTISEMENT

I-PAC ED Raid: ಟಿಎಂಸಿ ಅರ್ಜಿ ವಜಾಗೊಳಿಸಿದ ಕೋಲ್ಕತ್ತ ಹೈಕೋರ್ಟ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಜನವರಿ 2026, 12:54 IST
Last Updated 14 ಜನವರಿ 2026, 12:54 IST
   

ಕೋಲ್ಕತ್ತ(ಪಶ್ಚಿಮ ಬಂಗಾಳ): ರಾಜಕೀಯ ಸಲಹಾ ಸಂಸ್ಥೆ ಇಂಡಿಯನ್‌ ಪೊಲಿಟಿಕಲ್‌ ಆ್ಯಕ್ಷನ್‌ ಕಮಿಟಿ (ಐ–ಪ್ಯಾಕ್‌) ಮೇಲೆ ನಡೆದ ಇ.ಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ ಸಲ್ಲಿಸಿದ ಅರ್ಜಿಯನ್ನು ಕೋಲ್ಕತ್ತ ಹೈಕೋರ್ಟ್‌ ವಜಾಗೊಳಿಸಿದೆ.

ಕಳೆದ ವಾರ ಐ–ಪ್ಯಾಕ್‌ ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್‌ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ(ಇ.ಡಿ) ದಾಳಿ ನಡೆಸಿತ್ತು. ಈ ವೇಳೆ ಪೊಲೀಸರೊಂದಿಗೆ ಮಧ್ಯಪ್ರವೇಶಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅಲ್ಲಿಂದ ಕೆಲವು ದಾಖಲೆಗಳನ್ನು ಹೊತ್ತೊಯ್ದಿದ್ದರು.

ತನಿಖೆಗೆ ಅಡ್ಡಿಪಡಿಸಿದ ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಇ.ಡಿ ಹೈಕೋರ್ಟ್‌ ಮೆಟ್ಟಿಲೇರಿತ್ತು. ದತ್ತಾಂಶಗಳ ರಕ್ಷಣೆ ಕೋರಿ ಟಿಎಂಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು.

ADVERTISEMENT

ಜಾರಿ ನಿರ್ದೇಶನಾಲಯದ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್‌ ಎಸ್‌.ವಿ.ರಾಜು, ಈ ವಿಷಯವಾಗಿ ಸುಪ್ರೀಂ ಕೋರ್ಟ್‌ನಲ್ಲಿಯೂ ಅರ್ಜಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಬಾಕಿಯಿರುವಾಗ ಹೈಕೋರ್ಟ್ ವಿಚಾರಣೆ ಮಾಡಲು ಸಾಧ್ಯವಿಲ್ಲ’ ಎಂದು ನ್ಯಾಯಮೂರ್ತಿ ಸುವ್ರಾ ಘೋಷ್ ಅವರ ಪೀಠದ ಮುಂದೆ ಹೇಳಿದ್ದಾರೆ.

ಜನವರಿ 8ರಂದು ಎರಡು ಕಡೆ ನಡೆದ ದಾಳಿಯಲ್ಲಿ ಇ.ಡಿ ಯಾವುದೇ ವಸ್ತುಗಳನ್ನು ವಶಪಡಿಸಿಕೊಂಡಿಲ್ಲ ಎಂದು ತಿಳಿಸಿದ ಅವರು, ‘ಇ.ಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದನ್ನೆಲ್ಲಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೆಗೆದುಕೊಂಡು ಹೋಗಿದ್ದಾರೆ’ ಎಂದು ತಿಳಿಸಿದ್ದಾರೆ.

ವಿಚಾರಣೆ ಮುಂದೂಡಬೇಕು ಎಂಬ ಜಾರಿ ನಿರ್ದೇಶನಾಲಯದ ಮನವಿಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪರ ವಕೀಲ ಕಲ್ಯಾಣ್ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇ.ಡಿ ವಾದವನ್ನು ದಾಖಲಿಸಿಕೊಂಡ ನ್ಯಾಯಪೀಠ, ಟಿಎಂಸಿ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.