
ಇ.ಡಿ
ನವದೆಹಲಿ: ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕರ ನಿವಾಸದ ಮೇಲೆ ಇ.ಡಿ ನಡೆಸಿದ ದಾಳಿ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಪಶ್ಚಿಮ ಬಂಗಾಳದ ಸರ್ಕಾರ ಹಸ್ತಕ್ಷೇಪ ನಡೆಸಿರುವುದು ಆಘಾತಕಾರಿ ಎಂದು ಜಾರಿ ನಿರ್ದೇಶನಾಲಯ ಇಂದು (ಗುರುವಾರ) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ವಿಪುಲ್ ಪಂಚೋಲಿ ಒಳಗೊಂಡ ಪೀಠವು ಅರ್ಜಿಗಳ ವಿಚಾರಣೆ ನಡೆಸಿತು.
ಜಾರಿ ನಿರ್ದೇಶನಾಲಯದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿಂದೆಯೂ ಶಾಸನಬದ್ಧ ಅಧಿಕಾರಗಳನ್ನು ಚಲಾಯಿಸುವಾಗ ಮಮತಾ ಬ್ಯಾನರ್ಜಿ ಹಸ್ತಕ್ಷೇಪ-ಅಡಚಣೆ ಮಾಡಿದ್ದರು ಎಂದು ಉಲ್ಲೇಖಿಸಿದ್ದಾರೆ.
ಇದು ತುಂಬಾ ಆಘಾತಕಾರಿ ಪ್ರವೃತ್ತಿಯನ್ನು ಬಿಂಬಿಸುತ್ತದೆ. ಇಂತಹವುಗಳನ್ನು ಪ್ರೋತ್ಸಾಹಿಸುವ ಮೂಲಕ ಕೇಂದ್ರ ತನಿಖಾ ಸಂಸ್ಥೆಗಳ ಸ್ಥೈರ್ಯ ಕುಗ್ಗಿಸಲಾಗುತ್ತದೆ ಎಂದು ಅವರು ವಾದ ಮಾಡಿದ್ದಾರೆ.
ಕಳ್ಳತನ ಮಾಡಿದ ಬಳಿಕ ಧರಣಿ ನಡೆಸಬಹುದೆಂದು ರಾಜ್ಯ ಸರ್ಕಾರಗಳು ಭಾವಿಸುತ್ತವೆ. ಅಲ್ಲಿ ಹಾಜರಿದ್ದ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 8ರಂದು ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಕಚೇರಿ ಮತ್ತು ಅದರ ನಿರ್ದೇಶಕ ಪ್ರತೀಕ್ ಜೈನ್ ಮೇಲೆ ಇ.ಡಿ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಥಳಕ್ಕೆ ಬಂದು ಕಡತಗಳನ್ನು ವಶಕ್ಕೆ ಪಡೆದಿದ್ದರು ಎಂದು ಆರೋಪಿಸಲಾಗಿದೆ.
ಮಮತಾ ಬ್ಯಾನರ್ಜಿ ಕರ್ತವ್ಯಕ್ಕೆ ಅಡಚಣೆ ಮಾಡಿದ್ದಾರೆ ಎಂದು ಇ.ಡಿ ಆರೋಪಿಸಿದೆ. ಆದರೆ ಇ.ಡಿ ಅತಿಕ್ರಮಣ ಮಾಡಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಅಲ್ಲದೆ ಇ.ಡಿ. ಅಧಿಕಾರಿಗಳ ವಿರುದ್ಧ ಪಶ್ಚಿಮ ಬಂಗಾಳದ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.