ADVERTISEMENT

Iran-Israel Conflict | ಇರಾನ್‌ನಿಂದ ತಾಯ್ನಾಡಿಗೆ ಭಾರತೀಯರು; ಪ್ರಕ್ರಿಯೆ ಆರಂಭ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಜೂನ್ 2025, 2:31 IST
Last Updated 17 ಜೂನ್ 2025, 2:31 IST
ಎಸ್‌. ಜೈಶಂಕರ್
ಎಸ್‌. ಜೈಶಂಕರ್   

ನವದೆಹಲಿ: ಇರಾನ್‌ ಮತ್ತು ಇಸ್ರೇಲ್ ನಡುವೆ ಸಂಘರ್ಷದ ಪರಿಸ್ಥಿತಿ ತೀವ್ರಗೊಳ್ಳುತ್ತಿದ್ದು, ಈ ನಡುವೆ ಭಾರತ ಇರಾನ್‌ನಲ್ಲಿರುವ ಭಾರತೀಯರನ್ನು ಅರ್ಮೇನಿಯಾ ಮಾರ್ಗವಾಗಿ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ಆರಂಭಿಸಿದೆ.

ಇಸ್ರೇಲ್‌ನಲ್ಲಿರುವ ಭಾರತೀಯರನ್ನೂ ಸ್ಥಳಾಂತರಿಸುವ ಯೋಜನೆ ಸಂಬಂಧ ಭಾರತ ಕಾರ್ಯಪ್ರವೃತ್ತವಾಗಿದೆ.

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಉಲ್ಬಣಗೊಳ್ಳುತ್ತಿರುವ ಸಂದರ್ಭದಲ್ಲಿ ಈ ಹಿಂದೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ನೀಡಿದ್ದ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ಪುನರುಚ್ಚರಿಸಿದ್ದು, ಇದು ಯುದ್ಧದ ಯುಗವಲ್ಲ ಎಂದು ಸೋಮವಾರ ತಿಳಿಸಿದ್ದಾರೆ.

ADVERTISEMENT

ವಿದ್ಯಾರ್ಥಿಗಳು ಸೇರಿದಂತೆ 100ಕ್ಕೂ ಹೆಚ್ಚು ಭಾರತೀಯರ ಮೊದಲ ಬ್ಯಾಚ್ ಅನ್ನು ಇರಾನ್‌ನಿಂದ ಅರ್ಮೇನಿಯಾ ಮಾರ್ಗವಾಗಿ ಸ್ಥಳಾಂತರಿಸಲಾಯಿತು. ಅಲ್ಲಿಂದ ವಿಮಾನದ ಮೂಲಕ ಭಾರತಕ್ಕೆ ಕರೆದೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ.

ಟೆಹರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭದ್ರತಾ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಇರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿದಂತೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಅರ್ಮೇನಿಯಾದ ವಿದೇಶಾಂಗ ಸಚಿವ ಅರಾರತ್ ಮಿರ್ಜೋಯನ್ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಭಾರತೀಯರನ್ನು ಸ್ಥಳಾಂತರಿಸುವ ಪ್ರಕ್ರಿಯೆ ಪ್ರಾರಂಭವಾಯಿತು ಎಂದು ತಿಳಿದುಬಂದಿದೆ.

ಸೈಪ್ರಸ್‌ನ ಅಧ್ಯಕ್ಷ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರೊಂದಿಗಿನ ಸಭೆ ಬಳಿಕ ಮಾತನಾಡಿದ ಮೋದಿ, ಪಶ್ಚಿಮ ಏಷ್ಯಾ ಮತ್ತು ಯುರೋಪ್‌ನಲ್ಲಿ ನಡೆಯುತ್ತಿರುವ ಸಂಘರ್ಷಗಳ ಕುರಿತು ಕಳವಳ ವ್ಯಕ್ತಪಡಿಸಿದ್ದು, ಇದು ಯುದ್ಧದ ಯುಗವಲ್ಲ. ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳುವುದು ಮತ್ತು ಶಾಂತಿ ಸ್ಥಿರತೆ ಪುನಃಸ್ಥಾಪನೆಗೆ ಒತ್ತಾಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.