ಒಮರ್ ಅಬ್ದುಲ್ಲಾ
ಪಿಟಿಐ ಚಿತ್ರ
ಜಮ್ಮು: ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ತಲಾ ₹10 ಲಕ್ಷ ಪರಿಹಾರವನ್ನು ಶನಿವಾರ ಘೋಷಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಮೇ 7ರಂದು ಭಾರತೀಯ ಸಶಸ್ತ್ರ ಪಡೆಗಳು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕರ 9 ಶಿಬಿರಗಳ ಮೇಲೆ ದಾಳಿ ನಡೆಸಿದ್ದವು. ಇದಾದ ನಂತರ ಪೂಂಚ್, ರಾಜೌರಿ, ಜಮ್ಮು ಮತ್ತು ಬಾರಾಮುಲ್ಲಾ ವಲಯಗಳಲ್ಲಿ ಪಾಕ್ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ ಹೆಚ್ಚುವರಿ ಜಿಲ್ಲಾ ಅಭಿವೃದ್ಧಿ ಆಯುಕ್ತ ಮತ್ತು 19 ಮಂದಿ ನಾಗರಿಕರು ಮೃತಪಟ್ಟಿದ್ದಾರೆ.
ಬುಧವಾರ ಪೂಂಚ್‌ನಲ್ಲಿ 12, ಶುಕ್ರವಾರ ಉರಿ ಮತ್ತು ಪೂಂಚ್‌ನಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಶನಿವಾರ ಬೆಳಿಗ್ಗೆ ಸರ್ಕಾರಿ ಹಿರಿಯ ಅಧಿಕಾರಿ ಸೇರಿದಂತೆ ಐವರು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ.
ಇತ್ತೀಚೆಗೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಯಿಂದ ಅಮಾಯಕರ ಜೀವಹಾನಿಯಾಗಿದ್ದು, ತೀವ್ರ ನೋವುಂಟಾಗಿದೆ. ಜನರ ಕಷ್ಟವನ್ನು ದೂರ ಮಾಡಲು ನಮ್ಮ ಸರ್ಕಾರ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಯಾವುದೇ ಪರಿಹಾರದಿಂದ ಪ್ರೀತಿಪಾತ್ರರನ್ನು ಕಳೆದುಕೊಂಡವರ ನೋವವನ್ನು ಗುಣಪಡಿಸಲು ಸಾಧ್ಯವಿಲ್ಲ. ಆದರೆ ಅವರಿಗೆ ಬೆಂಬಲ ಮತ್ತು ಸಹಕಾರ ನೀಡುವ ಸಂಕೇತವಾಗಿ, ಮೃತಪಟ್ಟವರ ಕುಟುಂಬಗಳಿಗೆ ₹ 10 ಲಕ್ಷ ಪರಿಹಾರವನ್ನು ನೀಡಲಾಗುವುದು. ಈ ದುಃಖದ ಸಮಯದಲ್ಲಿ ನಾವು ಅವರೊಂದಿಗೆ ನಿಲ್ಲುತ್ತೇವೆ ಎಂದೂ ಸಿಎಂ ಓಮರ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.