ನವದೆಹಲಿ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿ ಇರುವ ವ್ಯಕ್ತಿಯು ಇನ್ನೊಂದು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗದೆ ಇದ್ದ ಸಂದರ್ಭದಲ್ಲಿ, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಲು ಅಡ್ಡಿ ಇಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರು ಇದ್ದ ತ್ರಿಸದಸ್ಯ ಪೀಠವು ಈ ಸ್ಪಷ್ಟನೆ ನೀಡಿದೆ. ಜೈಲಿನಲ್ಲಿ ಇರುವ ಆರೋಪಿಯೊಬ್ಬ, ಇನ್ನೊಂದು ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿಯಾಗಿದ್ದರೆ, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನು ಕೋರಲು ಅವಕಾಶ ಇದೆಯೇ ಎಂಬ ಪ್ರಶ್ನೆಯನ್ನು ಪೀಠವು ಪರಿಶೀಲಿಸಿತ್ತು.
‘ಇನ್ನೊಂದು ಪ್ರಕರಣದಲ್ಲಿ ಬಂಧಿತನಾಗಿದ್ದರೂ, ರೆಗ್ಯುಲರ್ ಜಾಮೀನಿಗೆ ಅರ್ಜಿ ಸಲ್ಲಿಸಲು ಆರೋಪಿಗೆ ಅವಕಾಶ ಇದ್ದೇ ಇರುತ್ತದೆ’ ಎಂದು ನ್ಯಾಯಮೂರ್ತಿ ಪಾರ್ದೀವಾಲಾ ಅವರು ತೀರ್ಪನ್ನು ಪ್ರಕಟಿಸುವ ಸಂದರ್ಭದಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.