ಸುಪ್ರೀಂ ಕೋರ್ಟ್
ನವದೆಹಲಿ: ಪ್ರಕರಣವೊಂದರಲ್ಲಿ ಜೈಲುಪಾಲಾಗಿರುವ ಆರೋಪಿಯು ಬೇರೊಂದು ಅಪರಾಧ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ಕಾನೂನಿನಲ್ಲಿ ಅವಕಾಶವಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
2023ರಲ್ಲಿ ಧನರಾಜ್ ಅಸ್ವಾನಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ, ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಈ ಆದೇಶ ಪ್ರಕಟಿಸಿದೆ.
ಜೈಲಿನಲ್ಲಿರುವ ಆರೋಪಿಯು ಮತ್ತೊಂದು ಕ್ರಿಮಿನಲ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲು ಅರ್ಹನೇ ಎಂಬುದರ ಕುರಿತು ನ್ಯಾಯಪೀಠ ವಿವರಣೆ ನೀಡಿದೆ.
ಯಾವುದೇ ಅಪರಾಧಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವುದಕ್ಕೂ ಮುನ್ನ ಆತ ನಿರೀಕ್ಷಣಾ ಜಾಮೀನು ಪಡೆಯಲು ಅರ್ಹನಾಗಿರುತ್ತಾನೆ. ಒಂದು ವೇಳೆ ಆ ಪ್ರಕರಣದಲ್ಲಿ ಆತನನ್ನು ಬಂಧಿಸಿದರೆ ಸಾಮಾನ್ಯ ಜಾಮೀನಿಗೆ ಅರ್ಜಿ ಸಲ್ಲಿಸುವುದು ಮಾತ್ರ ಅವಕಾಶವಿರುತ್ತದೆ ಎಂದು ಪರ್ದಿವಾಲಾ ತಿಳಿಸಿದ್ದಾರೆ.
ಈಗಾಗಲೇ ಪ್ರಕರಣವೊಂದರಲ್ಲಿ ಜೈಲಿನಲ್ಲಿರುವ ಆರೋಪಿಗೆ ಮತ್ತೊಂದು ಕ್ರಿಮಿನಲ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡಲು ಸೆಷನ್ಸ್ ಅಥವಾ ಹೈಕೋರ್ಟ್ ತಡೆ ನೀಡಲು ಅವಕಾಶವಿಲ್ಲ. ಒಂದು ವೇಳೆ ತಡೆ ನೀಡಿದರೆ ಅದು ಕಾನೂನಿಗೆ ವಿರುದ್ಧವಾದ ಕ್ರಮವಾಗಿರುತ್ತದೆ ಎಂದು ನ್ಯಾಯಪೀಠ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.