ADVERTISEMENT

ಜಮ್ಮು ಎನ್‌ಕೌಂಟರ್: ಇಬ್ಬರು ಉಗ್ರರ ಹತ್ಯೆ, ಓರ್ವ ಶರಣು

ಪಿಟಿಐ
Published 30 ಜೂನ್ 2021, 10:31 IST
Last Updated 30 ಜೂನ್ 2021, 10:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದ್ದು, ಓರ್ವ ಶರಣಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಲ್ಗಾಂ ಜಿಲ್ಲೆಯ ಚಿಮ್ಮರ್ ಗ್ರಾಮದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿತ್ತು.

ಈ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭಿಸಿದ್ದ ಬೆನ್ನಲ್ಲೇ ಎನ್‌ಕೌಂಟರ್ ನಡೆದಿತ್ತುಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದ್ದು, ಶರಣಾಗಿರುವ ಉಗ್ರನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಮ್ಮು ವಿಮಾನ ನಿಲ್ದಾಣದಲ್ಲಿನ ವಾಯುಪಡೆ ನೆಲೆಯ ಮೇಲೆ ಬಾಂಬ್ ದಾಳಿ ನಡೆದ ಬೆನ್ನಲ್ಲೇ ಈ ಘಟನೆ ವರದಿಯಾಗಿದೆ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳು ಇದೇ ಮೊದಲ ಬಾರಿಗೆ ಭಯೋತ್ಪಾದನಾ ದಾಳಿ ನಡೆಸಲು ಡ್ರೋನ್ ಬಳಸಿತ್ತು. ಈ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸುತ್ತಿವೆ.

ಇತ್ತೀಚೆಗೆ ಜಮ್ಮು-ಕಾಶ್ಮೀರದ ಸರ್ವ ರಾಜಕೀಯ ಪಕ್ಷಗಳ ಸಭೆಯಲ್ಲಿ ರಾಜ್ಯದ ಸ್ಥಾನಮಾನವನ್ನು ಮರಳಿ ನೀಡುತ್ತೇವೆ ಎಂದು ಸಂಸತ್ತಿನಲ್ಲಿ ನೀಡಿದ ಭರವಸೆಯನ್ನು ಪಾಲಿಸಲು ಬದ್ಧರಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.