
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರ ಸಂಜೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಜಲ್ಟಾ ಪ್ರದೇಶದಲ್ಲಿ ಉಗ್ರರು ಅಡಗಿರುವ ವಿಶ್ವಾಸಾರ್ಹ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಗುಂಡಿನ ಚಕಮಕಿ ನಡೆಯಿತು.
ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದು ಶೋಧ ಆರಂಭಿಸುತ್ತಿದ್ದಂತೆ, ಉಗ್ರರು ಗುಂಡು ಹಾರಿಸಲು ಆರಂಭಿಸಿದ್ದರು. ಬಳಿಕ, ಪೊಲೀಸರು ಪ್ರತಿ ದಾಳಿ ನಡೆಸಿದ್ದಾರೆ.
‘ಆರಂಭಿಕ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡರು. ವೈದ್ಯಕೀಯ ಚಿಕಿತ್ಸೆಗಾಗಿ ತಕ್ಷಣ ಅವರನ್ನು ಸ್ಥಳಾಂತರಿಸಲಾಯಿತು. ಅಲ್ದಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ,
ಎನ್‌ಕೌಂಟರ್ ಆರಂಭವಾದ ನಂತರ, ಹೆಚ್ಚುವರಿ ಪಡೆಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಇದರಿಂದಾಗಿ ಉಗ್ರರು ತಪ್ಪಿಸಿಕೊಳ್ಳುವುದನ್ನು ತಡೆಯಲು ಆ ಪ್ರದೇಶವನ್ನು ಸುತ್ತುವರಿದು ಭದ್ರತೆ ಹೆಚ್ಗಿಸಲಾಗಿದೆ. ಸೋಮವಾರ ಸಂಜೆಯಿಂದ ಕಾರ್ಯಾಚರಣೆ ಮುಂದುವರಿದಿದ್ದರಿಂದ ಸೇನೆ ಮತ್ತು ಅರೆಸೈನಿಕ ಪಡೆಗಳು ಸೇರಿದಂತೆ ಭದ್ರತಾ ಪಡೆಗಳು ಬಿಗಿ ಕಟ್ಟೆಚ್ಚರ ವಹಿಸಿವೆ ಎಂದು ವರದಿಯಾಗಿದೆ.
ಅಧಿಕಾರಿಗಳು ಪ್ರದೇಶವನ್ನು ಸಂಪೂರ್ಣವಾಗಿ ಬಂದ್ ಮಾಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎನ್‌ಕಂಟರ್ ಸ್ಥಳದಿಂದ ದೂರವಿರಲು ನಾಗರಿಕರಿಗೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.