ಸುವರ್ಣರೇಖಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿರುವ ದೃಶ್ಯ
–ಪಿಟಿಐ ಚಿತ್ರ
ರಾಂಚಿ: ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ಭಾರಿ ಮಳೆಯಿಂದಾಗಿ ಐವರು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ತಡರಾತ್ರಿ ಸೆರೈಕೆಲಾ–ಖಾರ್ಸಾವಾನ್ ಜಿಲ್ಲೆಯಲ್ಲಿ ಮನೆಯ ಗೋಡೆ ಕುಸಿದು ಮಹಿಳೆ ಮತ್ತು ಏಳು ವರ್ಷದ ಮಗ ಸಾವಿಗೀಡಾಗಿದ್ದಾರೆ. ರಾಜನಗರ ಬ್ಲಾಕ್‌ನ ದಂಡು ಗ್ರಾಮದಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಖಾರ್ಸಾವಾನ್ ಪ್ರದೇಶದ ಶಿಮ್ಲಾದಲ್ಲಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ಮನೆಯ ಗೋಡೆ ಕುಸಿದು ಐದು ವರ್ಷದ ಬಾಲಕ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಗೌರವ್ ಕುಮಾರ್ ತಿಳಿಸಿದ್ದಾರೆ.
ಮತ್ತೊಂದೆಡೆ ಉಕ್ಕಿ ಹರಿಯುತ್ತಿರುವ ಸಿಯಾರಿ ನದಿಯಲ್ಲಿ ದಂಪತಿ ಕೊಚ್ಚಿಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯದಾದ್ಯಂತ ನಿರಂತರ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಮನೆಗಳು ಕುಸಿದಿದ್ದು, ರಸ್ತೆಗಳು ಮತ್ತು ಕೃಷಿಭೂಮಿ ಜಲಾವೃತಗೊಂಡಿದೆ.
ರಾಂಚಿಯ ಪಿಸ್ಕಾ ರೈಲು ನಿಲ್ದಾಣದ ಬಳಿ ನಿರ್ಮಾಣ ಹಂತದ ಮೇಲ್ಸೇತುವೆಯ ಎರಡೂ ಬದಿಗಳಲ್ಲಿನ ಕಾಂಕ್ರೀಟ್ ಚಪ್ಪಡಿಗಳು ಕುಸಿದು, ಸಂಚಾರ ದಟ್ಟಣೆ ಉಂಟಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಗಸ್ಟ್ 25ರವರೆಗೆ ರಾಜ್ಯದ ಹಲವೆಡೆ ಧಾರಾಕಾರವಾಗಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.