ADVERTISEMENT

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಕುರಿತು ತೀರ್ಪು ನೀಡಿದ್ದ ನ್ಯಾಯಮೂರ್ತಿ ರಾಜೀನಾಮೆ

ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಪುಷ್ಪಾ ಗನೆಡೀವಾಲಾ ನೀಡಿದ್ದ ತೀರ್ಪು ವಿವಾದಕ್ಕೆ ಕಾರಣವಾಗಿತ್ತು

ಪಿಟಿಐ
Published 11 ಫೆಬ್ರುವರಿ 2022, 10:26 IST
Last Updated 11 ಫೆಬ್ರುವರಿ 2022, 10:26 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ‘ಚರ್ಮಕ್ಕೆ ಚರ್ಮ ತಾಗಿದರೆ ಮಾತ್ರ ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯ’ ಎಂಬ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್‌ನ ನಾಗಪುರ ಪೀಠದ ನ್ಯಾಯಮೂರ್ತಿ ಪುಷ್ಪಾ ಗನೆಡೀವಾಲಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಅವರು ಗುರುವಾರ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದುಬಾಂಬೆ ಹೈಕೋರ್ಟ್‌ ಮೂಲಗಳು ಹೇಳಿವೆ.

ಅವರು ಪ್ರಸ್ತುತ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿದ್ದಾರೆ. ಅವರ ಅಧಿಕಾರಾವಧಿ ಶುಕ್ರವಾರ ಕೊನೆಗೊಳ್ಳಲಿತ್ತು. ಆದರೆ, ಸುಪ್ರೀಂಕೋರ್ಟ್‌ ಕೊಲಿಜಿಯಂ ಅವರ ಅಧಿಕಾರಾವಧಿಯನ್ನು ವಿಸ್ತರಿಸಿರಲಿಲ್ಲ, ಬಡ್ತಿಯನ್ನೂ ನೀಡಿರಲಿಲ್ಲ ಎಂದು ಇವೇ ಮೂಲಗಳು ಹೇಳಿವೆ.

ADVERTISEMENT

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ಅವರು ನೀಡಿದ್ದ ತೀರ್ಪು ವಿವಾದಕ್ಕೀಡಾಗಿತ್ತು. ‘ಚರ್ಮಕ್ಕೆ ಚರ್ಮ ತಾಗಿದರೆ ಮಾತ್ರ ಅದನ್ನು ಪೋಕ್ಸೊ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಎಂದು ಪರಿಗಣಿಸಲು ಸಾಧ್ಯ’ ಎಂಬುದಾಗಿ ಅವರು ಕಳೆದ ವರ್ಷ ಜನವರಿಯಲ್ಲಿ ಅವರು ತೀರ್ಪು ನೀಡಿದ್ದರು.

ಈ ಹಿನ್ನೆಲೆಯಲ್ಲಿ, ಅವರನ್ನು ಹೈಕೋರ್ಟ್‌ನ ಕಾಯಂ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡುವ ಶಿಫಾರಸನ್ನು ಸುಪ್ರೀಂಕೋರ್ಟ್‌ ಕೊಲಿಜಿಯಂ ಹಿಂಪಡೆದಿತ್ತು. ಹೆಚ್ಚುವರಿ ನ್ಯಾಯಮೂರ್ತಿಯಾಗಿ ಅವರ ಅಧಿಕಾರಾವಧಿಯನ್ನು ಒಂದು ವರ್ಷ ವಿಸ್ತರಿಸಿತ್ತು.

ಅವರಿಗೆ ಹಿಂಬಡ್ತಿ ನೀಡಿ, ಜಿಲ್ಲಾ ಸೆಷನ್ಸ್‌ ನ್ಯಾಯಾಧೀಶೆಯನ್ನಾಗಿ ನೇಮಕ ಮಾಡಲಾಗುತ್ತದೆ ಎಂಬುದನ್ನು ಕೊಲಿಜಿಯಂನ ನಿರ್ಧಾರ ಸೂಚಿಸುವಂತಿತ್ತು ಎಂದು ಮೂಲಗಳು ಅಭಿಪ್ರಾಯಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.