ಲಖನೌ: ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಅಲಹಾಬಾದ್ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಶನಿವಾರ ಅಧಿಕಾರ ವಹಿಸಿಕೊಂಡರು. ನ್ಯಾಯಮೂರ್ತಿ ವರ್ಮಾ ಅವರ ದೆಹಲಿಯ ನಿವಾಸದಲ್ಲಿ ಭಾರಿ ಪ್ರಮಾಣದಲ್ಲಿ ನಗದು ಪತ್ತೆಯಾದ ನಂತರ ಅವರ ವಿರುದ್ಧ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮಿತಿಯೊಂದನ್ನು ರಚಿಸಿದೆ.
ಅವರ ವಿರುದ್ಧ ನಡೆಯುತ್ತಿರುವ ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರಿಗೆ ನ್ಯಾಯಾಂಗಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ವಹಿಸುವುದಿಲ್ಲ ಎಂದು ಮೂಲಗಳು ಹೇಳಿವೆ. ನ್ಯಾಯಮೂರ್ತಿ ವರ್ಮಾ ಅವರು ಖಾಸಗಿ ಕೊಠಡಿಯಲ್ಲಿ ಅಧಿಕಾರ ವಹಿಸಿಕೊಂಡರು ಎಂದು ಗೊತ್ತಾಗಿದೆ.
ನ್ಯಾಯಮೂರ್ತಿ ವರ್ಮಾ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕು ಎಂಬ ಕೋರಿಕೆ ಇರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಕೆಲವು ದಿನಗಳ ಹಿಂದೆ ವಜಾಗೊಳಿಸಿದೆ. ವಿಚಾರಣೆ ಮುಗಿದ ನಂತರದಲ್ಲಿ ಎಫ್‌ಐಆರ್ ಬಗ್ಗೆ ತೀರ್ಮಾನ ಕೈಗೊಳ್ಳಬಹುದು ಎಂದು ಅದು ಹೇಳಿದೆ.
ನ್ಯಾಯಮೂರ್ತಿ ವರ್ಮಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡುವುದನ್ನು ಅಲಹಾಬಾದ್ ಹೈಕೋರ್ಟ್‌ನ ವಕೀಲರ ಸಂಘವು ವಿರೋಧಿಸಿತ್ತು.
ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರುಣ್ ಭನ್ಸಾಲಿ ಅವರಿಗೆ ಶನಿವಾರ ಪತ್ರವೊಂದನ್ನು ಬರೆದಿರುವ ಅಲಹಾಬಾದ್ ಹೈಕೋರ್ಟ್ ವಕೀಲರ ಸಂಘದ ಕಾರ್ಯದರ್ಶಿ ವಿಕ್ರಾಂತ್ ಪಾಂಡೆ ಅವರು, ‘ಕಾನೂನಿನ ಪ್ರಕಾರ ಹಾಗೂ ಹಿಂದಿನಿಂದ ನಡೆದುಬಂದ ಪದ್ಧತಿಯ ಪ್ರಕಾರ ನ್ಯಾಯಮೂರ್ತಿ ವರ್ಮಾ ಅವರಿಗೆ ಪ್ರಮಾಣ ವಚನ ಬೋಧಿಸಿರುವ ಕ್ರಮ ಸ್ವೀಕಾರಾರ್ಹ ಅಲ್ಲ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.