ADVERTISEMENT

ಕರೂರಿನಲ್ಲಿ ನಡೆದ ಭೀಕರ ಕಾಲ್ತುಳಿತಕ್ಕೆ ಚೀನಾ ಮರುಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಸೆಪ್ಟೆಂಬರ್ 2025, 14:13 IST
Last Updated 29 ಸೆಪ್ಟೆಂಬರ್ 2025, 14:13 IST
<div class="paragraphs"><p>ಕಾಲ್ತುಳಿತ</p></div>

ಕಾಲ್ತುಳಿತ

   

–ರಾಯಿಟರ್ಸ್ ಚಿತ್ರ

ಬೀಜಿಂಗ್‌: ತಮಿಳುನಾಡಿನ ಕರೂರಿನಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತ ಕುರಿತು ಚೀನಾ ಸಂತಾಪ ಸೂಚಿಸಿದೆ.

ADVERTISEMENT

‘ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಈ ದುರಂತದಲ್ಲಿ ಚೀನಾದ ಪ್ರಜೆ ಮೃತಪಟ್ಟ ಅಥವಾ ಗಾಯಗೊಂಡ ಕುರಿತು ವರದಿಯಾಗಿಲ್ಲ’ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಗುವೊ ಜಿಯಾಕುನ್‌ ಹೇಳಿದ್ದಾರೆ.

ಭೀಕರ ಕಾಲ್ತುಳಿತ ದುರಂತದಲ್ಲಿ ಚೀನಾ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ ಎಂಬ ವದಂತಿ ಮೂಡಿತ್ತು. ಈ ಕುರಿತು ದಿ ಹಿಂದೂಸ್ತಾನ್ ಟೈಮ್ಸ್ ವೆಬ್‌ಸೈಟ್ ವರದಿ ಮಾಡಿದೆ.

ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ, ನಟ ವಿಜಯ್‌ ಅವರು ಕರೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ರ್‍ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತದಿಂದಾಗಿ 41 ಜನ ಮೃತಪಟ್ಟು, ಇತರ ಅನೇಕರು ಗಾಯಗೊಂಡಿದ್ದರು.

ಘಟನೆ ಸಂಬಂಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿರುವ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷವು, ಸಿಬಿಐ ಅಥವಾ ಸ್ವತಂತ್ರ ತನಿಖೆಗೆ ಆದೇಶಿಸುವಂತೆ ಕೋರಿದೆ. ದುರಂತದಲ್ಲಿ ಮಡಿದ ಕುಟುಂಬಗಳಿಗೆ ತಲಾ ₹20 ಲಕ್ಷ ನೀಡುವುದಾಗಿ ವಿಜಯ್ ಘೋಷಿಸಿದ್ದಾರೆ. 

ಮೃತರಲ್ಲಿ 17 ಮಹಿಳೆಯರು, 14 ಪುರುಷರು ಮತ್ತು ಒಂಬತ್ತು ಮಕ್ಕಳು ಸೇರಿದ್ದಾರೆ. ಒಟ್ಟು 30 ಶವಗಳ ಮರಣೋತ್ತರ ಪರೀಕ್ಷೆ ನಡೆಸಿ, ಅವರ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಇವರಲ್ಲದೆ ಇತರ 67 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಮಿಳುನಾಡಿನ ಆರೋಗ್ಯ ಕಾರ್ಯದರ್ಶಿ ಪಿ. ಸೆಂಥಿಲ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

ತಮಿಳುನಾಡಿನ ಕರೂರು ಜಿಲ್ಲೆಯಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳನ್ನು ಹರಡದಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಸೋಮವಾರ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.