ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯು ಏಳನೇ ದಿನಕ್ಕೆ ಕಾಲಿಟ್ಟಿದೆ. ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗುರುವಾರ ಮೂವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿ ಮತ್ತು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಭಾರತೀಯ ಸೇನೆಯ ಉತ್ತರ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಪ್ರತೀಕ್ ಶರ್ಮಾ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಕಾರ್ಯಾಚರಣೆಯ ಬಗ್ಗೆ ಪ್ರತೀಕ್ ಶರ್ಮಾ ಅವರಿಗೆ ವಿವರಣೆ ನೀಡಿದ್ದಾರೆ ಎಂದು ವರದಿಯಾಗಿದೆ.
ಅರಣ್ಯ ಪ್ರದೇಶದಲ್ಲಿ ಉಗ್ರರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಡ್ರೋನ್‌ಗಳು ಮತ್ತು ಹೆಲಿಕಾಪ್ಟರ್‌ಗಳು ಸೇರಿದಂತೆ ಎಲ್ಲಾ ವಿಧಾನಗಳನ್ನು ಅನುಸರಿಸುತ್ತಿವೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಈವರೆಗೆ ಏಳು ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶರ್ಮಾ ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಅಖಾಲ್‌ನಲ್ಲಿರುವ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಗುಪ್ತಚರ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದರು ಎಂದು ಶರ್ಮಾ ಹೇಳಿದ್ದಾರೆ.
ಈ ವರ್ಷ ಕಾಶ್ಮೀರ ಕಣಿವೆಯಲ್ಲಿ ನಡೆಸುತ್ತಿರುವ ದೀರ್ಘ ಕಾಲದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಇದಾಗಿದೆ. ದಕ್ಷಿಣ ಕಾಶ್ಮೀರದಲ್ಲಿ ಶಾಂತಿ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸುವಲ್ಲಿ ಭಾರತೀಯ ಸೇನೆ ದೃಢ ಸಂಕಲ್ಪ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.