ADVERTISEMENT

ಎಸ್‌ಐಆರ್‌ಗೆ ವಿರೋಧ: ಕೇರಳ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಪಿಟಿಐ
Published 29 ಸೆಪ್ಟೆಂಬರ್ 2025, 10:10 IST
Last Updated 29 ಸೆಪ್ಟೆಂಬರ್ 2025, 10:10 IST
 ಪಿಣರಾಯಿ ವಿಜಯನ್
 ಪಿಣರಾಯಿ ವಿಜಯನ್   

ತಿರುವನಂತಪುರ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್‌ಐಆರ್‌) ಕೈಗೊಳ್ಳುವ ಕೇಂದ್ರ ಚುನಾವಣಾ ಆಯೋಗದ ಕ್ರಮವನ್ನು ವಿರೋಧಿಸುವ ನಿರ್ಣಯವನ್ನು ಕೇರಳ ವಿಧಾನಸಭೆಯಲ್ಲಿ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಎಸ್‌ಐಆರ್ ವಿರುದ್ಧ ಈಗಾಗಲೇ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕೂಟವು, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸದನದಲ್ಲಿ ಮಂಡಿಸಿದ ನಿರ್ಣಯವನ್ನು ಬೆಂಬಲಿಸಿತು.

‘ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರದಲ್ಲೇ ನಡೆಯಲಿದೆ. ಇದರ ಬೆನ್ನಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದೆ. ಇಂತಹ ಪರಿಸ್ಥಿತಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸುವುದು ದುರುದ್ದೇಶಪೂರಿತವಾಗಿದೆ’ ಎಂದು ವಿಜಯನ್ ತಿಳಿಸಿದ್ದಾರೆ.

ADVERTISEMENT

ಚುನಾವಣಾ ಆಯೋಗವು ಎಸ್‌ಐಆರ್ ನಡೆಸಲು ಹೊರಟಿರುವುದು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಪ್ರಕ್ರಿಯೆಯನ್ನು ಜಾರಿಗೆ ತರಲು ನಡೆಸುತ್ತಿರುವ ಹಿಂಬಾಗಿಲಿನ ಪ್ರಯತ್ನವಾಗಿದ್ದು, ಬಿಹಾರದಲ್ಲಿ ಇತ್ತೀಚೆಗೆ ನಡೆದ ಎಸ್‌ಐಆರ್ ಪ್ರಕ್ರಿಯೆಯು ಅಂತಹ ಕಳವಳಗಳನ್ನು ದೃಢಪಡಿಸುತ್ತದೆ ಎಂದು ವಿಜಯನ್ ದೂರಿದ್ದಾರೆ.

‘ಬಿಹಾರದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಸಾಂವಿಧಾನಿಕ ಸಿಂಧುತ್ವವು ಸುಪ್ರೀಂ ಕೋರ್ಟ್‌ನ ಪರಿಗಣನೆಯಲ್ಲಿರುವಾಗ, ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ತರಾತುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸುವ ಅಗತ್ಯತೆ ಏನಿದೆ’ ಎಂದು ಅವರು ಪ್ರಶ್ನಿಸಿದ್ದಾರೆ.

‘ಎಸ್‌ಐಆರ್ ಪ್ರಕ್ರಿಯೆಯನ್ನು ಜಾರಿಗೆ ತರಲು ಮಾಡುತ್ತಿರುವ ಪ್ರಯತ್ನಗಳನ್ನು ಚುನಾವಣಾ ಆಯೋಗದ ಸಹಜ ಪ್ರಕ್ರಿಯೆ ಎಂದು ಪರಿಗಣಿಸಲು ಆಗುವುದಿಲ್ಲ’ ಎಂದು ಅವರು ಕಿಡಿಕಾರಿದ್ದಾರೆ.

‘ದೀರ್ಘಕಾಲದ ಸಿದ್ಧತೆ ಮತ್ತು ಸಮಾಲೋಚನೆಯ ಅಗತ್ಯವಿರುವ ಎಸ್‌ಐಆರ್ ಪ್ರಕ್ರಿಯೆಯನ್ನು ತರಾತುರಿಯಲ್ಲಿ ಜಾರಿಗೆ ತರುವ ಮೂಲಕ ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಬುಡಮೇಲು, ಬಡವರು ಮತ್ತು ವಲಸೆ ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ’ ಎಂದು ಅವರು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.