
ತಿರುವನಂತಪುರ: ಹೊಸ ಸರ್ಕಾರಿ ಶಾಲೆ, ಕಾಲೇಜು, ವಿಶ್ವವಿದ್ಯಾಲಯ ಸೇರಿದಂತೆ ಇತರ ಶಿಕ್ಷಣ ಸಂಸ್ಥೆಗಳು ಇನ್ನು ಮುಂದೆ ಧರ್ಮ ಆಧಾರಿತ ಹೆಸರುಗಳನ್ನು ಇಡುವಂತಿಲ್ಲ ಎಂದು ಕೇರಳ ಸರ್ಕಾರ ಆದೇಶಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಮುಂದಿನ ದಿನಗಳಲ್ಲಿ ಹೊಸದಾಗಿ ಸ್ಥಾಪಿಸುವಂತಹ ಯಾವುದೇ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯ, ಅನುದಾನಿತ ಶಿಕ್ಷಣ ಸಂಸ್ಥೆಗೆ ಧರ್ಮ ಆಧಾರಿತ ಹೆಸರನ್ನು ಇಡಬಾರದು ಎಂದು ಸರ್ಕಾರ ಆದೇಶಿಸಿದೆ.
‘ಸರ್ಕಾರ ನಡೆಸುವ ಶಿಕ್ಷಣ ಸಂಸ್ಥೆಗಳು ಜಾತ್ಯತೀತವಾಗಿ ಉಳಿಯಲು, ಸಮಾನತೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಸಾಂವಿಧಾನಿಕ ಮೌಲ್ಯಗಳನ್ನು ಪ್ರತಿಬಿಂಬಿಸುವಂತೆ ಮಾಡುವ ಗುರಿಯನ್ನು ಸರ್ಕಾರ ಹೊಂದಿದೆ’ ಎಂದು ಮೂಲಗಳು ತಿಳಿಸಿವೆ.
ಸರ್ಕಾರದ ಈ ನಿರ್ಧಾರವು ಹೊಸದಾಗಿ ಸ್ಥಾಪಿಸುವಂತಹ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ. ಸದ್ಯ ಅಸ್ತಿತ್ವದಲ್ಲಿರುವ ಶಿಕ್ಷಣ ಸಂಸ್ಥೆಗಳಿಗೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ನ್ಯಾಯಮೂರ್ತಿ ಜೆ.ಬಿ.ಕೋಶಿ ಆಯೋಗದ ವರದಿಯನ್ನು ಸಚಿವ ಸಂಪುಟವು ತಾತ್ವಿಕವಾಗಿ ಅಂಗೀಕರಿಸಿದ್ದು, ವರದಿಯನ್ನು ಅಧಿಕೃತವಾಗಿ ಪ್ರಕಟಿಸಲು ನಿರ್ಧರಿಸಿದೆ ಎಂದೂ ಮೂಲಗಳು ವಿವರಿಸಿವೆ.
ಕೇರಳದಲ್ಲಿ ಕ್ರಿಶ್ಚಿಯನ್ ಅಲ್ಪಸಂಖ್ಯಾತರ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಕಲ್ಯಾಣಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಅಧ್ಯಯನ ಮಾಡಲು ನ್ಯಾಯಮೂರ್ತಿ ಜೆ.ಬಿ. ಕೋಶಿ ಆಯೋಗವನ್ನು ಸರ್ಕಾರ ನೇಮಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.