ADVERTISEMENT

ಕುಲಪತಿಗಳ ವಿರುದ್ಧ ಯಾವುದೇ ಕ್ರಮ ಬೇಡ: ರಾಜ್ಯಪಾಲರಿಗೆ ಕೇರಳ ಹೈಕೋರ್ಟ್ ಸೂಚನೆ

ಪಿಟಿಐ
Published 8 ನವೆಂಬರ್ 2022, 19:38 IST
Last Updated 8 ನವೆಂಬರ್ 2022, 19:38 IST
ಕೇರಳ ಹೈಕೋರ್ಟ್
ಕೇರಳ ಹೈಕೋರ್ಟ್   

ಕೊಚ್ಚಿ: ಕಾರಣ ಕೇಳಿ ನೋಟಿಸ್‌ ನೀಡಿರುವ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಕೇರಳ ಹೈಕೋರ್ಟ್‌ ಮಂಗಳವಾರ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರಿಗೆ ಸೂಚಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಲು ಮತ್ತೆ ಮೂರು ದಿನಗಳ ಕಾಲಾವಕಾಶವನ್ನು ಕುಲಾಧಿಪತಿಯೂ ಆಗಿರುವ ರಾಜ್ಯಪಾಲರಿಗೆ ನ್ಯಾಯಮೂರ್ತಿ ದೇವನ್‌ ರಾಮಚಂದ್ರನ್‌ ಅವರು ನೀಡಿದ್ದಾರೆ. ಪ್ರಕರಣದ ವಿಚಾರಣೆಯನ್ನು ನವೆಂಬರ್‌ 17ರಂದು ಕೈಗೆತ್ತಿಕೊಳ್ಳುವುದಾಗಿಯೂ ಹೇಳಿದ್ದಾರೆ.

ಆರಿಫ್‌ ಖಾನ್‌ ಅವರು ರಾಜ್ಯದ 11 ವಿಶ್ವವಿದ್ಯಾಲಯದ ಕುಲಪತಿಗಳಿಗೆ ನೋಟಿಸ್‌ ಜಾರಿ ಮಾಡಿದ್ದರು. ತಮಗೆ ಕಾನೂನುನಾಹಿರವಾಗಿ ನೋಟಿಸ್ ನೀಡಲಾಗಿದೆ ಎಂದು ಆರೋಪಿಸಿ ಕುಲಪತಿಗಳು ನ್ಯಾಯಾಲಯದ ಮೊರೆ ಹೋಗಿದ್ದರು.

ADVERTISEMENT

ಎಲ್ಲಾ ಕುಲಪತಿಗಳು ನೋಟಿಸ್‌ಗೆ ಉತ್ತರ ನೀಡಿದ್ದಾರೆ ಎಂದು ರಾಜ್ಯಪಾಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈಚೆಗೆ ಸುರ್ಪೀಂ ಕೋರ್ಟ್ ನೀಡಿರುವ ತೀರ್ಪಿನ ಪ್ರಕಾರ ಕುಲಪತಿಗಳ ನೇಮಕಾತಿಗ ಕಾನೂನುಬಾಹಿರವಾಗಿದ್ದು, ಈ ಹುದ್ದೆಗಳಲ್ಲಿ ಮುಂದುವರಿಯಲು ಅವರಿಗೆ ಯಾಕೆ ಅವಕಾಶ ನೀಡಬೇಕು ಎಂದು ರಾಜ್ಯಪಾಲರು ನೋಟಿಸ್‌ನಲ್ಲಿ ಕೇಳಿದ್ದರು.

ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಗಳನ್ನು ಪಾಲಿಸದೆ ನೇಮಕ ಮಾಡಿರುವ ಕಾರಣ ತಿರುವನಂತಪುರದ ಅಬ್ದುಲ್‌ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯ ನೇಮಕಾತಿಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್‌ ಈಚೆಗೆ ಆದೇಶ ನೀಡಿತ್ತು.

ನೇಮಕಾತಿಗೆ ತಡೆಯಾಜ್ಞೆ ನೀಡಲು ನಿರಾಕರಣೆ: ತಿರುವನಂತಪುರದ ಅಬ್ದುಲ್‌ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯ ನೇಮಕಾತಿಗೆ ತಡೆಯಾಜ್ಞೆ ನೀಡಲು ಕೇರಳ ಹೈಕೋರ್ಟ್‌ ಮಂಗಳವಾರ ನಿರಾಕರಿಸಿದೆ.

ಯುಜಿಸಿ ನಿಯಮಗಳಿಗೆ ಅನುಸಾರವಾಗಿಯೇ ತಾತ್ಕಾಲಿಕ ನೇಮಕಾತಿಗಳನ್ನು ಮಾಡಬೇಕು ಎಂದು ರಾಜ್ಯಪಾಲರ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.