ತಿರುವನಂತಪುರ: ಕೇರಳದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಬುಧವಾರ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಅಲಪ್ಪುಳ, ಎರ್ನಾಕುಲಂ, ತ್ರಿಶ್ಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರ ಜಿಲ್ಲೆಗಳಲ್ಲಿ ಮಧ್ಯಾಹ್ನ ಒಂದು ಗಂಟೆಯಿಂದ ಮೂರು ಗಂಟೆಗಳವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿತ್ತು.
ಗಾಳಿಯ ಪ್ರಮಾಣ ಹೆಚ್ಚಿರುವ ಕಾರಣ, ಕೇರಳ–ಕರ್ನಾಟಕ– ಲಕ್ಷದ್ವೀಪ ಕರಾವಳಿಯಲ್ಲಿ ಬುಧವಾರ ಮತ್ತು ಗುರುವಾರ ಮೀನುಗಾರಿಕಾ ಚಟುವಟಿಕೆಯನ್ನು ನಡೆಸದಂತೆ ಮೀನುಗಾರರಿಕೆ ಐಎಂಡಿ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ಕೆಲವು ವಾರಗಳಿಂದ ಭಾರಿ ಮಳೆಯಾಗುತ್ತಿರುವ ಪರಿಣಾಮ, ಕೆಲವು ಪ್ರದೇಶಗಳು ಮತ್ತು ಮನೆಗಳು ಜಲಾವೃತಗೊಂಡಿದ್ದು ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
ಗರಿಷ್ಠ ತಾಪಮಾನ ಕುಸಿತ (ಚಂಡೀಗಢ ವರದಿ): ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹರಿಯಾಣ ಮತ್ತು ಪಂಜಾಬ್‌ನಲ್ಲಿ ಗರಿಷ್ಠ ತಾಪಮಾನವು ತೀವ್ರವಾಗಿ ಕುಸಿದಿದೆ ಎಂದು ಐಎಂಡಿ ಕಚೇರಿ ಬುಧವಾರ ತಿಳಿಸಿದೆ.
ಚಂಡೀಗಢದಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾಮಾನ್ಯ ಮಿತಿಗಿಂತ ಐದು ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ.
ಹರಿಯಾಣ ಮತ್ತು ಪಂಜಾಬ್‌ನಲ್ಲಿ ಸಾಮಾನ್ಯವಾಗಿ ಗರಿಷ್ಠ ತಾಪಮಾನವು 31ರಿಂದ 34 ಡಿಗ್ರಿ ಸೆಲ್ಸಿಯಸ್‌ವರೆಗೆ ಇದ್ದು, ಇದು ಹಿಂದಿನ ವಾರಕ್ಕೆ ಹೋಲಿಸಿದರೆ ವ್ಯತಿರಿಕ್ತವಾಗಿದೆ. ಕಳೆದ ವಾರ ಕೆಲವು ಪ್ರದೇಶಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಮೀರಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.