
ಸಾಂದರ್ಭಿಕ ಚಿತ್ರ
ಕಣ್ಣೂರು (ಕೇರಳ): ವಿದ್ಯಾರ್ಥಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ವಿಧಿಸಲ್ಪಟ್ಟ ಬಿಜೆಪಿ ಕಾರ್ಯಕರ್ತನೂ ಆಗಿರುವ ಶಿಕ್ಷಕನನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹೇಳಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶೆ ಜಲರಾಜನಿ ಎಂ.ಟಿ. ಅವರು ಕಡವತ್ತೂರಿನ ನಿವಾಸಿ ಪಪ್ಪೆನ್ ಮಾಸ್ಟರ್ (48) ಎಂದೂ ಕರೆಯಲ್ಪಡುವ ಪದ್ಮರಾಜನ್ ಕೆ. ಅವರನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ತಪ್ಪಿತಸ್ಥರೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ ಎಂದು ವರದಿಯಾಗಿದೆ.
ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಶಿಕ್ಷಣ ಇಲಾಖೆಯು ಪದ್ಮರಾಜನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಲಾ ಆಡಳಿತ ಮಂಡಳಿಗೆ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ಪದ್ಮರಾಜನ್ ಅವರನ್ನು ಸೇವೆಯಿಂದ ವಜಾಗೊಳಿಸಿ ಶಾಲೆಯ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ ಎಂದು ಶಿವನ್‌ಕುಟ್ಟಿ ಹಂಚಿಕೊಂಡಿದ್ದಾರೆ.
ಪದ್ಮರಾಜನ್ ಅವರು 10 ವರ್ಷದ ವಿದ್ಯಾರ್ಥಿಯ ಮೇಲೆ ಶಾಲೆಯ ಶೌಚಾಲಯದಲ್ಲಿ ಮತ್ತು ಅವರ ನಿವಾಸದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಘಟನೆ ಸಂಬಂಧ 2020ರ ಏಪ್ರಿಲ್ 15ರಂದು ಪದ್ಮರಾಜನ್ ಅವರನ್ನು ಪಾನೂರು ಪೊಲೀಸರು ಬಂಧಿಸಿದ್ದರು.
ಈ ಪ್ರಕರಣವು ಎಸ್‌ಡಿಪಿಐ ನಡೆಸಿದ ಪಿತೂರಿಯ ಭಾಗವಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ನಂತರ ಆರೋಪಿಗಳಿಗೆ ಜಾಮೀನು ದೊರಕಿತ್ತು.
ಸಂತ್ರಸ್ತೆಯ ಕುಟುಂಬಸ್ಥರು ನ್ಯಾಯಾಲಯದ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಕೇರಳ ಹೈಕೋರ್ಟ್, ಪ್ರಕರಣ ಸಂಬಂಧ ಮತ್ತೊಮ್ಮೆ ತನಿಖೆ ನಡೆಸುವಂತೆ ಆದೇಶಿಸಿತ್ತು. ಹಿಂದಿನ ವಿಚಾರಣೆಗಳ ಬಗ್ಗೆ ಅತೃಪ್ತಿ ಹೊಂದಿದ್ದ ಕಾರಣಕ್ಕೆ ತನಿಖಾ ತಂಡವನ್ನು ಎರಡು ಬಾರಿ ಬದಲಾಯಿಸಲಾಗಿತ್ತು.
ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಇ.ಜೆ. ಜಯರಾಜ್ ನೇತೃತ್ವದ ಐದನೇ ತನಿಖಾ ತಂಡವು ಅಂತಿಮವಾಗಿ ತನಿಖೆಯನ್ನು ಪೂರ್ಣಗೊಳಿಸಿ ಆರೋಪಪಟ್ಟಿ ಸಲ್ಲಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.