ರಾಹುಲ್ ಗಾಂಧಿ (ಸಂಗ್ರಹ ಚಿತ್ರ)
ಖಾಂಡವಾ (ಮಧ್ಯಪ್ರದೇಶ): ಇತ್ತೀಚೆಗೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಮೃತಪಟ್ಟ ಬುಡಕಟ್ಟು ಮಹಿಳೆಯ ಕುಟುಂಬದೊಂದಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕರೆ ಮಾಡಿ ಮಾತನಾಡಿ, ಸಾಂತ್ವನ ಹೇಳಿದ್ದಾರೆ.
ಈ ವೇಳೆ ರಾಹುಲ್ ಸಹಾಯದ ಭರವಸೆಯನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಬುಡಕಟ್ಟು ಸಮುದಾಯದ 45 ವಯಸ್ಸಿನ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು, ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದರು.
ಅಖಿಲ ಭಾರತ ಆದಿವಾಸಿ ಕಾಂಗ್ರೆಸ್ ಅಧ್ಯಕ್ಷ ವಿಕ್ರಾಂತ್ ಭುರಿಯಾ ಅವರು ಇಂದು (ಬುಧವಾರ) ಮಧ್ಯಾಹ್ನ ಸಂತ್ರಸ್ತೆಯ ಮನೆಗೆ ಭೇಟಿ ಮಾಡಿದ್ದಾರೆ. ಈ ವೇಳೆ ರಾಹುಲ್ ಮಾತನಾಡಿ ಧೈರ್ಯ ತುಂಬಿದ್ದಾರೆ ಎಂದು ತಿಳಿದು ಬಂದಿದೆ. ಸಂಭಾಷಣೆಯ ವಿಡಿಯೊವನ್ನೂ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ.
ಸಂಭಾಷಣೆಯ ವೇಳೆ ರಾಹುಲ್ ಗಾಂಧಿ ಆರೋಪಿಗಳು ನಿಮಗೆ ತಿಳಿದಿರುವವರೇ?, ಆರೋಪಿಗಳನ್ನು ಬಂಧಿಸಲಾಗಿದೆಯೇ? ಎಂದು ಪ್ರಶ್ನಿಸಿದರು. ಇದಕ್ಕೆ ಕುಟುಂಬಸ್ಥರು ಹೌದು ಎಂದು ಹೇಳಿದ್ದಾರೆ.
ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಿ ಮತ್ತು ಕುಟುಂಬದ ಬೆಂಬಲಕ್ಕೆ ನಿಲ್ಲುವಂತೆ ರಾಹುಲ್ ಅವರು ಭುರಿಯಾ ಅವರಿಗೆ ಸೂಚಿಸಿದ್ದಾರೆ.
ಆರೋಪಿಗಳ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮೃತಪಟ್ಟ ಮಹಿಳೆಗೆ ಇಬ್ಬರು ಮಕ್ಕಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.