ಮಲ್ಲಿಕಾರ್ಜುನ ಖರ್ಗೆ ಹಾಗೂ ನರೇಂದ್ರ ಮೋದಿ
–ಪಿಟಿಐ ಚಿತ್ರ
ನವದೆಹಲಿ: ‘ಆಪರೇಷನ್ ಸಿಂಧೂರ’ ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಇಂದು (ಗುರುವಾರ) ನಡೆದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅನುಪಸ್ಥಿತಿಯನ್ನು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ಅವರು ತಮ್ಮನ್ನು ಸಂಸತ್ತಿಗಿಂತ ಮೇಲಿನವರೆಂದು ಭಾವಿಸಿದ್ದಾರೆಯೇ’ ಎಂದು ಕೇಳಿದ್ದಾರೆ.
‘ಹಿಂದಿನ ಸರ್ವಪಕ್ಷ ಸಭೆಯಲ್ಲಿ ಅವರು(ಪ್ರಧಾನಿ ಮೋದಿ) ಭಾಗಿಯಾಗಿರಲಿಲ್ಲ. ಈ ಬಾರಿಯೂ ಅವರು ಇಲ್ಲ. ಇದು ಬಿಕ್ಕಟ್ಟಿನ ಸಮಯ. ಆದ್ದರಿಂದ ಯಾರನ್ನೂ ಟೀಕಿಸಲು ಬಯಸುವುದಿಲ್ಲ. ಸಮಯ ಬಂದಾಗ ಈ ಬಗ್ಗೆ ಪ್ರಶ್ನಿಸುತ್ತೇವೆ’ ಎಂದು ಹೇಳಿದ್ದಾರೆ.
‘ದೇಶದ ಹಿತಾಸಕ್ತಿ ಮತ್ತು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಕೆಲವೊಂದು ವಿಷಯವನ್ನು ಚರ್ಚಿಸಲು ಸಾಧ್ಯವಿಲ್ಲ ಎಂದು ಅವರು(ಸರ್ಕಾರ) ನಮಗೆ ಹೇಳಿದ್ದಾರೆ. ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇಂತಹ ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರದೊಂದಿಗೆ ನಿಲ್ಲುವ ಭರವಸೆಯನ್ನು ನಾವೆಲ್ಲರೂ ಸರ್ಕಾರಕ್ಕೆ ನೀಡಿದ್ದೇವೆ’ ಎಂದು ತಿಳಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವ ಪಕ್ಷದ ನಿಲುವನ್ನು ಪುನರುಚ್ಛರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.