ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ
(ಪಿಟಿಐ ಸಂಗ್ರಹ ಚಿತ್ರ)
ಬೆಂಗಳೂರು: ಸಂಸತ್ತಿನ ಕಾರ್ಯಕಲಾಪದಲ್ಲಿ ತಲ್ಲೀನರಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ 'ಇನ್‌ವೆಸ್ಟ್ ಕರ್ನಾಟಕ 2025' ಹೂಡಿಕೆ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್‌ನ ಸಂವಹನ ವಿಭಾಗದ ಮುಖ್ಯಸ್ಥ ಜೈರಾಮ್ ರಮೇಶ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಜೈರಾಮ್, 'ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸತ್ತಿನ ಬಜೆಟ್ ಅಧಿವೇಶನದ ಮೇಲಿನ ಚರ್ಚೆಯಲ್ಲಿ ತಲ್ಲೀನರಾಗಿದ್ದಾರೆ. ಹಾಗಾಗಿ ಬೆಂಗಳೂರಿನಲ್ಲಿ ಇಂದು (ಮಂಗಳವಾರ) ಸಂಜೆ ಆರಂಭವಾಗಲಿರುವ ಇನ್‌ವೆಸ್ಟ್ ಕರ್ನಾಟಕ ಹೂಡಿಕೆ ಸಮಾವೇಶದಲ್ಲಿ ಭಾಗಿಯಾಗಲು ಸಾಧ್ಯವಾಗದಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ' ಎಂದು ಸ್ಪಷ್ಟನೆ ನೀಡಿದ್ದಾರೆ.
'ಕರ್ನಾಟಕ ಹೂಡಿಕೆ ಸಮಾವೇಶಕ್ಕೆ ಖರ್ಗೆ ಹಾಗೂ ರಾಹುಲ್ ಶುಭ ಹಾರೈಸಿದ್ದಾರೆ. ಕರ್ನಾಟಕದ ವಿಶಿಷ್ಟ, ಸ್ಪರ್ಧಾತ್ಮಕ, ಆರ್ಥಿಕತೆಗೆ ಉತ್ತೇಜನ ನೀಡುವ ಈ ಶೃಂಗವು ಅತ್ಯಂತ ಫಲಪ್ರದಾಯಕ ಹಾಗೂ ಯಶಸ್ವಿಯಾಗಲಿದೆ' ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಮೊದಲು ಕರ್ನಾಟಕ ಸರ್ಕಾರವು ಆಯೋಜಿಸುತ್ತಿರುವ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು ಮತ್ತು ಬಿಜೆಪಿ ನಾಯಕರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿರುವುದು ಕಾಂಗ್ರೆಸ್ ನಾಯಕತ್ವದ ಅಸಮಾಧಾನಕ್ಕೆ ಕಾರಣವಾಗಿದ್ದು, ಖರ್ಗೆ ಹಾಗೂ ರಾಹುಲ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ ಎಂದು ವರದಿಯಾಗಿತ್ತು.
ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿ ಕೇಂದ್ರವನ್ನಾಗಿ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ನೆರವಾಗುವ, ನಾವೀನ್ಯ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸುವ ಆಶಯದ 'ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ (ಇನ್‌ವೆಸ್ಟ್ ಕರ್ನಾಟಕ–2025)' ಇಂದಿನಿಂದ ಆರಂಭವಾಗಲಿದೆ.
19 ದೇಶಗಳ ಹೆಸರಾಂತ ಉದ್ಯಮಿಗಳು, ಅವರ ಪ್ರತಿನಿಧಿಗಳು ಭಾಗವಹಿಸುವ ಮೂಲಕ ₹10 ಲಕ್ಷ ಕೋಟಿ ಬಂಡವಾಳ ಹೂಡಿಕೆಯ ನಿರೀಕ್ಷೆ ಮೂಡಿಸಿದೆ. ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಸಮಾವೇಶ ವೇದಿಕೆ ಒದಗಿಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.