ಕಿರಣ್ ರಿಜಿಜು
– ಪಿಟಿಐ ಚಿತ್ರ
ನವದೆಹಲಿ: ‘ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಪದಚ್ಯುತಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಸರ್ಕಾರ ಅವರ ವಿರುದ್ಧದ ಆರೋಪಗಳ ತನಿಖೆಗಾಗಿ ರಚಿಸಿರುವ ತ್ರಿಸದಸ್ಯ ಸಮಿತಿಯ ವರದಿಯ ನಿರೀಕ್ಷೆಯಲ್ಲಿದೆ’ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮಂಗಳವಾರ ತಿಳಿಸಿದ್ದಾರೆ.
ನ್ಯಾಯಮೂರ್ತಿ ವರ್ಮಾ ಅವರನ್ನು ಪದಚ್ಯುತಗೊಳಿಸಲು ಕೋರಿ ಹಲವು ಸಂಸದರು ನೋಟಿಸ್ ಸಲ್ಲಿಸಿದ್ದರು. ನೋಟಿಸ್ ಸ್ವೀಕರಿಸಿದ ನಂತರ ಅವರ ವಿರುದ್ಧದ ಭ್ರಷ್ಟಾಚಾರ ಆರೋಪಗಳ ತನಿಖೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಕಳೆದ ವರ್ಷದ ಆಗಸ್ಟ್ 12ರಂದು ತ್ರಿಸದಸ್ಯ ಸಮಿತಿಯನ್ನು ರಚಿಸಿದ್ದರು.
‘ಬುಧವಾರದಿಂದ ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಈ ವಿಷಯವನ್ನು ಕೈಗೆತ್ತಿಕೊಳ್ಳಲಾಗುತ್ತದೆಯೇ’ ಎಂದು ಕೇಳಿದ್ದಕ್ಕೆ, ಈ ವಿಷಯದ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ರಿಜಿಜು ನಿರಾಕರಿಸಿದರು.
‘ಸದನದ ಒಪ್ಪಿಗೆ ಮೇರೆಗೆ ಈ ವಿಷಯವನ್ನು ಸ್ಪೀಕರ್ ರಚಿಸಿದ ಸಮಿತಿಗೆ ವಹಿಸಲಾಗಿದೆ. ಸಮಿತಿ ತನ್ನ ಕರ್ತವ್ಯವನ್ನು ನಿರ್ವಹಿಸುತ್ತಿದ್ದು, ವರದಿ ಬರುವವರೆಗೆ ನಾವು ಕಾಯುತ್ತಿದ್ದೇವೆ. ಅದಕ್ಕೂ ಮೊದಲು, ನಾನು ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ’ ಎಂದು ತಿಳಿಸಿದರು.
ತನಿಖಾ ಸಮಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ ಮತ್ತು ಕರ್ನಾಟಕ ಹೈಕೋರ್ಟ್‌ನ ಹಿರಿಯ ವಕೀಲ ಬಿ.ವಿ. ಆಚಾರ್ಯ ಇದ್ದಾರೆ.
ಕಳೆದ ವರ್ಷ ಮಾರ್ಚ್ 14ರಂದು ಅವರ ಅಧಿಕೃತ ನಿವಾಸದಲ್ಲಿ ಸುಟ್ಟ ನೋಟುಗಳ ತುಂಡುಗಳು ಪತ್ತೆಯಾದ ನಂತರ ನ್ಯಾಯಮೂರ್ತಿ ವರ್ಮಾ ಅವರನ್ನು ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್ ಹೈಕೋರ್ಟ್‌ಗೆ ವಾಪಸ್ ಕಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.