
ಕಲ್ಕತ್ತ ಹೈಕೋರ್ಟ್
ಕೋಲ್ಕತ್ತ: ‘ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು (ಎಸ್‌ಐಆರ್) 2002ರ ಮತದಾರರ ಪಟ್ಟಿಯ ಆಧಾರದಲ್ಲಿ ಯಾಕೆ ಮಾಡಲಾಗುತ್ತಿದೆ ಎಂಬುದರ ಬಗ್ಗೆ ನ. 19ರ ಒಳಗೆ ಪ್ರಮಾಣಪತ್ರ ಸಲ್ಲಿಸಿ’ ಎಂದು ಕಲ್ಕತ್ತ ಹೈಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ಗುರುವಾರ ಸೂಚನೆ ನೀಡಿದೆ.
ಈ ಬಗ್ಗೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ಕುರಿತು ಪ್ರಕ್ರಿಯೆ ನೀಡುವಂತೆಯೂ ಹೈಕೋರ್ಟ್ ಆಯೋಗಕ್ಕೆ ಹೇಳಿದೆ. ‘ಇದೇ ರೀತಿಯ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ನಡೆಸುತ್ತಿದೆ. ಆದ್ದರಿಂದ ಈ ಅರ್ಜಿಯ ವಿಚಾರಣೆ ನಡೆಸಬಾರದು’ ಎಂದು ಆಯೋಗದ ಪರ ವಕೀಲೆ ಅನಾಮಿಕಾ ಪಾಂಡೆ ಮನವಿ ಮಾಡಿದರು.
ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಜಾಯ್ ಪಾಲ್ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸುತ್ತಿದೆ. 2025ರಲ್ಲಿ ಜನರ ಬಳಿ ಇರುವ ದಾಖಲೆಗಳ ಅನ್ವಯವೇ ಎಸ್‌ಐಆರ್ ಪ್ರಕ್ರಿಯೆ ನಡೆಸಬೇಕು ಎಂದು ಆಯೋಗಕ್ಕೆ ಸೂಚನೆ ನೀಡಬೇಕು’ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
‘ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು. ರಾಜ್ಯದ ಕೆಲವು ಭಾಗಗಳಲ್ಲಿ ಅವರನ್ನು ಬೆದರಿಸುವಂಥ ವಾತಾವರಣ ನಿರ್ಮಾಣವಾಗಿದೆ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.