ಕೋಲ್ಕತ್ತ: ಇಲ್ಲಿನ ಕಾನೂನು ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಘಟನೆ ನಡೆದು ಸುಮಾರು 2 ತಿಂಗಳ ಬಳಿಕ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಲಿಪೋರ್ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ಮುಂದೆ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಹಾಗೂ ಕಾಲೇಜಿನ ಹಳೆಯ ವಿದ್ಯಾರ್ಥಿ ಮೊನೋಜಿತ್ ಮಿಶ್ರಾ ಹಾಗೂ ಇತರ ಮೂವರು ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಾಂತ್ರಿಕ, ವೈಜ್ಞಾನಿಕ ಮತ್ತು ಸಾಂದರ್ಭಿಕ ಸಾಕ್ಷ್ಯಗಳ ಆಧಾರದ ಮೇಲೆ ಸಾಮೂಹಿಕ ಅತ್ಯಾಚಾರ, ಅಕ್ರಮ ಬಂಧನ, ಹಾನಿ ಮಾಡುವ ಉದ್ದೇಶದಿಂದ ಅಪಹರಣ, ಸಾಕ್ಷ್ಯಗಳ ನಾಶ, ತನಿಖೆಯ ದಾರಿ ತಪ್ಪಿಸುವುದು ಸೇರಿ ಇತರ ಆರೋಪಗಳನ್ನು ಹೊರಿಸಲಾಗಿದೆ.
ಸದ್ಯ ನಾಲ್ವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಜೂನ್ 25ರಂದು ದಕ್ಷಿಣ ಕೋಲ್ಕತ್ತದ ಕಾನೂನು ಪದವಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ, ಕಾಲೇಜಿನ ಭದ್ರತಾ ಸಿಬ್ಬಂದಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು.
ಕಾಲೇಜಿನ ಮಾಜಿ ವಿದ್ಯಾರ್ಥಿ ಮತ್ತು ಗುತ್ತಿಗೆ ಸಿಬ್ಬಂದಿಯಾಗಿರುವ ಮೊನೊಜಿತ್ ಮಿಶ್ರಾ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.