ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲಗಾಮ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ 10ನೇ ದಿನವೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ಅಡಗು ತಾಣಗಳನ್ನು ಸುತ್ತುವರಿಯಲು ಪ್ರಯತ್ನಿಸುತ್ತಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಭಯೋತ್ಪಾದಕರು ಕಾಡಿನಲ್ಲಿ ಹೇಗೆ ತಪ್ಪಿಸಿಕೊಳ್ಳಬೇಕೆಂಬ ತರಬೇತಿ ಪಡೆದಿರುವಂತೆ ತೋರುತ್ತಿದೆ. ಡ್ರೋನ್‌ಗಳ ಪತ್ತೆಯಿಂದ ತಪ್ಪಿಸಿಕೊಳ್ಳಲು ದಟ್ಟವಾದ ಗಿಡ–ಮರಗಳ ಕೆಳಗೆ ಅಡಗಿಕೊಂಡಿದ್ದಾರೆ ಎಂದು ಅಧಿಕಾರುಗಳು ಹೇಳಿದ್ದಾರೆ.
ಆಗಸ್ಟ್ 1ರಂದು ಕಾರ್ಯಾಚರಣೆ ಆರಂಭವಾಗಿದ್ದು, ಕುಲಗಾಮ್‌ನ ಅಖಾಲ್ ಅರಣ್ಯ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರು. ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಇಬ್ಬರು ಭಯೋತ್ಪಾದರನ್ನು ಹತ್ಯೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮುಖ್ಯಸ್ಥ ನಳಿನ್ ಪ್ರಭಾತ್ ಮತ್ತು ಉತ್ತರ ಸೇನೆಯ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಪ್ರತೀಕ್ ಶರ್ಮಾ ಸೇರಿದಂತೆ ಹಿರಿಯ ಪೊಲೀಸ್ ಮತ್ತು ಸೇನಾ ಅಧಿಕಾರಿಗಳು ದಿನದ 24 ಗಂಟೆಗಳಯೂ ಕಾರ್ಯಾಚರಣೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳು ಡ್ರೋನ್‌ಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಬಳಸಿಕೊಳ್ಳುತ್ತಿವೆ. ಅಡಗಿಕೊಂಡಿರುವ ಉಗ್ರರನ್ನು ನಿಗ್ರಹಿಸುವಲ್ಲಿ ಪ್ಯಾರಾ ಕಮಾಂಡೋಗಳು ಸಹ ಭದ್ರತಾ ಪಡೆಗಳಿಗೆ ಸಾಥ್ ನೀಡುತ್ತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.