ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು (ಸೋಮವಾರ) ನಡೆದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ವೇಳೆ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕುಲ್ಗಾಮ್‌ನ ಗುಡರ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಗುಪ್ತಚರ ಮಾಹಿತಿಯ ಮೇರೆಗೆ ಭದ್ರತಾ ಪಡೆ, ಜಮ್ಮು ಕಾಶ್ಮೀರ ಪೊಲೀಸ್ ಮತ್ತು ಸಿಆರ್‌ಪಿಎಫ್ ಅರೆಸೈನಿಕ ಪಡೆಯು ಜಂಟಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿತ್ತು. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಪ್ರತಿದಾಳಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಅಧಿಕಾರಿ ಸೇರಿದಂತೆ ಮೂವರು ಸೈನಿಕರು ಗಾಯಗೊಂಡಿದ್ದರು. ಗಾಯಗೊಂಡ ಸೈನಿಕರನ್ನು ತಕ್ಷಣವೆ ಸೈನಿಕ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಇಬ್ಬರು ಸೈನಿಕರು ತೀವ್ರ ಗಾಯಗಳಿಂದಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತಪಟ್ಟ ಭಯೋತ್ಪಾದಕರ ಗುರುತು ಪತ್ತೆಯಾಗಿಲ್ಲ. ಆದರೆ ಅವರು ವಿದೇಶಿ ಪ್ರಜೆಗಳೆಂದು ನಂಬಲಾಗಿದೆ. ಸದ್ಯ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.