ADVERTISEMENT

ಲಖಿಂಪುರ ಖೇರಿ ಹಿಂಸಾಚಾರ ಪೂರ್ವಯೋಜಿತ ಎಂದ ಎಸ್‌ಐಟಿ

ಪಿಟಿಐ
Published 14 ಡಿಸೆಂಬರ್ 2021, 10:13 IST
Last Updated 14 ಡಿಸೆಂಬರ್ 2021, 10:13 IST
ಲಖಿಂಪುರ ಖೇರಿ ಹಿಂಸಾಚಾರದ ಪಿಟಿಐ ಸಂಗ್ರಹ ಚಿತ್ರ
ಲಖಿಂಪುರ ಖೇರಿ ಹಿಂಸಾಚಾರದ ಪಿಟಿಐ ಸಂಗ್ರಹ ಚಿತ್ರ   

ಲಖಿಂಪುರ ಖೇರಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ 8 ಮಂದಿಯ ಸಾವಿಗೆ ಕಾರಣವಾಗಿದ್ದ ಹಿಂಸಾಚಾರ ಪೂರ್ವಯೋಜಿತ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ ಹೇಳಿದೆ.

ಆರೋಪಿಗಳ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಬೇಕು ಎಂದು ‘ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್‌’ಗೆ ಎಸ್‌ಐಟಿ ಮನವಿ ಮಾಡಿದೆ.

ಸದ್ಯ, ಪ್ರಕರಣಕ್ಕೆ ಸಂಬಂಧಿಸಿ ಬಂಧನದಲ್ಲಿರುವವರ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 279 (ಅಜಾಗರೂಕತೆಯಿಂದ ವಾಹನ ಚಾಲನೆ), 338 (ನಿರ್ಲಕ್ಷ್ಯದಿಂದ ಗಂಭೀರ ಗಾಯಗೊಳ್ಳಲು ಕಾರಣವಾಗುವುದು) ಹಾಗೂ 340 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣರಾಗುವುದು) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದರ ಬದಲಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307ರ (ಕೊಲೆ ಯತ್ನ) ಅಡಿ ಪ್ರಕರಣ ದಾಖಲಿಸಬೇಕು ಎಂದು ಎಸ್‌ಐಟಿ ವಿನಂತಿ ಮಾಡಿದೆ.

ಅಕ್ಟೋಬರ್‌ 3ರಂದು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾ ಮಗ ಆಶಿಶ್‌ ಮಿಶ್ರಾ ಹಾಗೂ ಅವರ ಬೆಂಗಾವಲುಪಡೆ ವಾಹನಗಳು ಚಲಿಸಿದ್ದವು. ಬಳಿಕ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿ ಮೃತಪಟ್ಟಿದ್ದರು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ), 147 (ದಂಗೆ), 148 (ಮಾರಕ ಆಯುಧಗಳನ್ನು ಹೊಂದಿರುವುದರ ಜತೆ ಗಲಭೆಗೆ ಕಾರಣರಾಗುವುದು) ಹಾಗೂ 120 (ಅಪರಾಧ ಸಂಚು) ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿರುವ ಪ್ರಕರಣಗಳನ್ನು ಎಸ್‌ಐಟಿ ಉಳಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.