ADVERTISEMENT

ಲಖಿಂಪುರ ಹಿಂಸಾಚಾರ: ಕೇಂದ್ರ ಸಚಿವರ ಪುತ್ರ, ಇತರ 14 ಮಂದಿ ವಿರುದ್ಧ ಪ್ರಕರಣ?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಅಕ್ಟೋಬರ್ 2021, 4:29 IST
Last Updated 4 ಅಕ್ಟೋಬರ್ 2021, 4:29 IST
ಲಖಿಂಪುರ ಹಿಂಸಾಚಾರ:ಪಿಟಿಐ ಚಿತ್ರ
ಲಖಿಂಪುರ ಹಿಂಸಾಚಾರ:ಪಿಟಿಐ ಚಿತ್ರ   

ಲಖನೌ: ಲಖಿಂಪುರದಲ್ಲಿ ಭಾನುವಾರ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಸಾವಿಗೀಡಾದ ಪ್ರಕರಣದಲ್ಲಿ ಕೇಂದ್ರ ಸಚಿವರ ಮಗನ ಮತ್ತು ಇತರ 14 ಜನರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಕಾರು ಹರಿದು ಮೃತಪಟ್ಟ ನಾಲ್ವರು ರೈತರ ಕುಟುಂಬಗಳನ್ನು ಭೇಟಿ ಮಾಡಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಉತ್ತರಪ್ರದೇಶ ಪೊಲೀಸರು ಮುಂಜಾನೆ ವಿಚಾರಣೆಗೆ ಒಳಪಡಿಸಿದ್ಧಾರೆ.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರು ಲಖಿಂಪುರಕ್ಕೆ ಭೇಟಿ ನೀಡಿದ ಸಂದರ್ಭ ಹಿಂಸಾಚಾರ ಭುಗಿಲೆದ್ದಿದ್ದು ರೈತರು ಸೇರಿ ಎಂಟು ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಲಖಿಂಪುರ್ ಖೇರಿಗೆ ಭೇಟಿ ನೀಡುತ್ತಾರೆ ಎಂಬ ಸುದ್ದಿಗಳ ಹಿನ್ನೆಲೆಯಲ್ಲಿ ಅವರ ವಿಕ್ರಮಾದಿತ್ಯ ಮಾರ್ಗದಲ್ಲಿರುವ ಮನೆಗೆ ಭದ್ರತೆ ಹೆಚ್ಚಿಸಲಾಗಿದೆ.

ಲಖಿಂಪುರದಲ್ಲಿ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಕಾರ್ಯಕ್ರಮದ ಬಳಿಕ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದ ರಾಜ್ಯ ಸಚಿವ ಅಜಯ್ ಮಿಶ್ರಾ ಅವರು ನೀಡಿದ ಹೇಳಿಕೆಯಿಂದ ರೊಚ್ಚಿಗೆದ್ದ ರೈತರು ಕಾರನ್ನು ಅಡ್ಡಗಟ್ಟಲು ಪ್ರಯತ್ನಿದಾಗ ಕಾರು ಹರಿದು ನಾಲ್ವರು ರೈತರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಘಟನೆ ಬಳಿಕ ಸ್ಥಳದಲ್ಲಿದ್ದ ಉದ್ರಿಕ್ತ ರೈತರ ಗುಂಪು ಸಚಿವರ ಬೆಂಗಾವಲು ವಾಹನವನ್ನು ಸುಟ್ಟುಹಾಕಿದ್ದು, ಅದರಲ್ಲಿದ್ದ ನಾಲ್ವರು ಸಾವಿಗೀಡಾಗಿದ್ದಾರೆ.

ಘಟನೆಯಲ್ಲಿ ಒಟ್ಟು ಎಂಟು ಜನರು ಸಾವಿಗೀಡಾಗಿದ್ದಾರೆ ಎಂದು ಉತ್ತರ ಪ್ರದೇಶ ಡಿಜಿಪಿ ಮುಕುಲ್ ಗೋಯೆಲ್ ಹೇಳಿದ್ದಾರೆ. ‘ಎಂಟರಲ್ಲಿ ನಾಲ್ವರು ರೈತರು ಮತ್ತು ಉಳಿದ ನಾಲ್ವರು ಬೆಂಗಾವಲು ವಾಹನದಲ್ಲಿದ್ದ ಇತರರು’ ಎಂದು ಅವರು ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.