ADVERTISEMENT

ಸಚಿವ ಮಿಶ್ರಾ ರೈತರನ್ನು ಪ್ರಚೋದಿಸದಿದ್ದರೆ ಹಿಂಸಾಚಾರ ನಡೆಯುತ್ತಿರಲಿಲ್ಲ: ಕೋರ್ಟ್‌

​ಪ್ರಜಾವಾಣಿ ವಾರ್ತೆ
Published 9 ಮೇ 2022, 15:41 IST
Last Updated 9 ಮೇ 2022, 15:41 IST

ಲಖನೌ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಅವರು ರೈತರ ವಿರುದ್ಧ ಪ್ರಚೋದನಕಾರಿ ಭಾಷೆ ಬಳಸದಿದ್ದರೆ ಲಖಿಂಪುರ ಖೇರಿ ಹಿಂಸಾಚಾರ ನಡೆಯುತ್ತಿರಲಿಲ್ಲ ಎಂದು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಸೋಮವಾರ ಹೇಳಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರಮುಖ ಆರೋಪಿಯಾಗಿದ್ದಾರೆ.

ಪ್ರಕರಣದ ನಾಲ್ವರು ಆರೋಪಿಗಳಾದ ಅಂಕಿತ್ ದಾಸ್, ಲುವ್‌ಕುಶ್‌, ಸುಮಿತ್ ಜೈಸ್ವಾಲ್ ಮತ್ತು ಶಿಶುಪಾಲ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸುವ ಸಂದರ್ಭದಲ್ಲಿ ನ್ಯಾಯಮೂರ್ತಿ ಡಿ.ಕೆ.ಸಿಂಗ್ ಅವರಿದ್ದ ನ್ಯಾಯಪೀಠವು ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿತು. ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಸೋಮವಾರ ಕೈಗೆತ್ತಿಕೊಳ್ಳಲಾಗಲಿಲ್ಲ. ಮೇ 25 ರಂದು ಈ ಅರ್ಜಿಯ ವಿಚಾರಣೆ ನಡೆಯಲಿದೆ.

ADVERTISEMENT

ಇದೇ ಫೆಬ್ರುವರಿಯಲ್ಲಿ ಲಖನೌ ಪೀಠವು ಆಶಿಶ್ ಮಿಶ್ರಾ ಅವರಿಗೆ ಜಾಮೀನು ನೀಡಿತ್ತು. ರೈತರು ಅರ್ಜಿ ಸಲ್ಲಿಸಿದ್ದರಿಂದ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ ಮತ್ತೆ ವಿಚಾರಣೆ ನಡೆಸುವಂತೆ ಹೈಕೋರ್ಟ್‌ಗೆ ಸೂಚಿಸಿತ್ತು.

‘ಉನ್ನತ ಹುದ್ದೆಯಲ್ಲಿರುವ ರಾಜಕೀಯ ವ್ಯಕ್ತಿಗಳು ಸಮಾಜದಲ್ಲಿ ಉಂಟಾಗುವ ಪರಿಣಾಮಗಳನ್ನು ಪರಿಗಣಿಸಿ ಸಭ್ಯ ಭಾಷೆಯಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನೀಡಬೇಕು. ತಮ್ಮ ಸ್ಥಾನಮಾನ ಮತ್ತು ಉನ್ನತ ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳಬೇಕಾಗಿರುವುದರಿಂದ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಬಾರದು’ ಎಂದೂ ನ್ಯಾಯಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.