ADVERTISEMENT

ಜನವರಿ 16ರಂದು ಕೋವಿಡ್‌ ಲಸಿಕೆ ವಿತರಣೆ: 'ಐತಿಹಾಸಿಕ ಹೆಜ್ಜೆ' ಎಂದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಜನವರಿ 2021, 14:04 IST
Last Updated 9 ಜನವರಿ 2021, 14:04 IST
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ   

ನವದೆಹಲಿ: ಕೋವಿಡ್‌ ಲಸಿಕೆ ವಿತರಣೆ ಅಭಿಯಾನದ ಮೂಲಕ ಸಾಂಕ್ರಾಮಿಕ ಪಿಡುಗಿನ ವಿರುದ್ಧದ ಹೋರಾಟದಲ್ಲಿ ಭಾರತವು ಐತಿಹಾಸಿಕ ಹೆಜ್ಜೆ ಇಡಲಿದೆ ಎಂಬ ಅಭಿಮತವನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ.

ಜನವರಿ 16ರಿಂದ ಆದ್ಯತೆ ಮೇರೆಗೆ ಕೋವಿಡ್‌ ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಲಾಗುವುದು ಎಂದು ಕೇಂದ್ರ ಸರ್ಕಾರ ಶನಿವಾರ ಮಾಹಿತಿ ನೀಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, 'ಜನವರಿ 16 ರಂದು ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಭಾರತವು ಐತಿಹಾಸಿಕ ಹೆಜ್ಜೆ ಇಡಲಿದೆ. ಆ ದಿನದಿಂದ ದೇಶದಾದ್ಯಂತ ಕೋವಿಡ್‌ ಲಸಿಕೆ ವಿತರಣೆ ಅಭಿಯಾನ ಪ್ರಾರಂಭವಾಗಲಿದೆ. ನಮ್ಮ ಧೈರ್ಯಶಾಲಿ ವೈದ್ಯರು, ಆರೋಗ್ಯ ಕಾರ್ಯಕರ್ತರು, ಸಫಾಯಿ ಕರ್ಮಚಾರಿಗಳು ಸೇರಿದಂತೆ ಮುಂಚೂಣಿ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು' ಎಂದು ತಿಳಿಸಿದ್ದಾರೆ.

ADVERTISEMENT

ಆದ್ಯತೆಯ ಮೇರೆಗೆ 3 ಕೋಟಿ ಆರೋಗ್ಯ ಸೇವೆ ಮತ್ತು ಮುಂಚೂಣಿ ಕಾರ್ಯಕರ್ತರಿಗೆ ಕೋವಿಡ್‌ ಲಸಿಕೆ ಹಾಕಲಾಗುವುದು. ಆ ಬಳಿಕ 50 ವರ್ಷ ಮೇಲ್ಪಟ್ಟ, 50 ವರ್ಷದೊಳಗಿನ(ಅನಾರೋಗ್ಯ ಪೀಡಿತ) 27 ಕೋಟಿ ಜನರಿಗೆ ಆದ್ಯತೆ ಮೇರೆಗೆ ಲಸಿಕೆ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್‌ ಸಂಸ್ಥೆಗಳಿಗೆ ತುರ್ತು ಪರಿಸ್ಥಿತಿಯಲ್ಲಿ ಷರತ್ತುಬದ್ಧ ಲಸಿಕೆ ಬಳಕೆಗೆ ಡಿಸಿಜಿಐ ಕಳೆದ ವಾರ ಅನುಮೋದನೆ ನೀಡಿದೆ. ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನೆಕಾ ಸಂಸ್ಥೆಗಳು 'ಕೋವಿಶೀಲ್ಡ್' ಲಸಿಕೆಯನ್ನು ಅಭಿವೃದ್ಧಿಪಡಿಸಿವೆ.

ಕಳೆದ 24 ಗಂಟೆಗಳಲ್ಲಿ 18,222 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ದೇಶದಾದ್ಯಂತ ಒಟ್ಟು ಕೋವಿಡ್‌ ಸೋಂಕಿತರ ಸಂಖ್ಯೆ 1,04,31,639ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.