ADVERTISEMENT

‘ಪೌರತ್ವ’ ಪ್ರತಿಭಟನೆ ವೇಳೆ ಹಿಂಸಾಚಾರ: ವಿದ್ಯಾರ್ಥಿಗಳ ರಕ್ಷಣೆಗೆ ಬಾರದ ಹೈಕೋರ್ಟ್‌

ಜಾಮಿಯಾ ವಿ.ವಿ. ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 17:30 IST
Last Updated 19 ಡಿಸೆಂಬರ್ 2019, 17:30 IST
ದೆಹಲಿ ಹೈಕೋರ್ಟ್‌
ದೆಹಲಿ ಹೈಕೋರ್ಟ್‌   

ನವದೆಹಲಿ (ಪಿಟಿಐ): ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ನಡೆದ, ಹಿಂಸಾಚಾರ ಪ್ರಕರಣದ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿರುವ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಬಂಧಿಸದಂತೆ ಪೊಲೀಸರಿಗೆ ನಿರ್ದೇಶನ ನೀಡಲು ದೆಹಲಿ ಹೈಕೋರ್ಟ್‌ ನಿರಾಕರಿಸಿದೆ.

ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ನಲ್ಲಿ ಆರು ಅರ್ಜಿಗಳು ಸಲ್ಲಿಕೆಯಾಗಿವೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು, ಈ ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತಮಟ್ಟದ ಆಯೋಗ ರಚಿಸಬೇಕು ಎಂದು ಅರ್ಜಿಗಳಲ್ಲಿ ಕೋರಲಾಗಿತ್ತು.

ದೆಹಲಿ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ಡಿ.ಎನ್.ಪಾಟೀಲ್ ಮತ್ತು ನ್ಯಾಯಮೂರ್ತಿ ಸಿ.ಹರಿಶಂಕರ್ ಅವರಿದ್ದ ಪೀಠವು ಈ ಅರ್ಜಿಗಳ ವಿಚಾರಣೆಯನ್ನು ಕೈಗೆತ್ತಿಕೊಂಡಿತು. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಆದೇಶ ನೀಡಲು ಪೀಠವು ನಿರಾಕರಿಸಿತು.

ADVERTISEMENT

ಈ ಪ್ರಕರಣದ ತನಿಖೆಗೆ ಉನ್ನತಮಟ್ಟದ ಆಯೋಗ ರಚಿಸುವ ಸಂಬಂಧ ವಿವರಣೆ ನೀಡಿ ಎಂದು ದೆಹಲಿ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ಪೀಠವು ಸೂಚನೆ ನೀಡಿತು. ಪ್ರಕರಣದ ಮುಂದಿನ ವಿಚಾರಣೆ ಫೆಬ್ರುವರಿ 4ರಂದು ನಡೆಯಲಿದೆ.

ಭಾನುವಾರ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದ ಮೂವರು ವಿದ್ಯಾರ್ಥಿಗಳು ಮತ್ತು ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯ ಹಾಗೂ ಮಾಜಿ ಶಾಸಕ ಆಸಿಫ್ ಖಾನ್ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

‘ನಾಚಿಕೆಯಾಗಬೇಕು’

ಈ ಪ್ರಕರಣದ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿರುವ ವಿದ್ಯಾರ್ಥಿಗಳನ್ನು ಬಂಧಿಸದಂತೆ ಮಧ್ಯಂತರ ಆದೇಶ ನೀಡಲು ನಿರಾಕರಿಸಿದ ಹೈಕೋರ್ಟ್‌ನ ಪೀಠದ ವಿರುದ್ಧ ವಕೀಲರು, ‘ನಾಚಿಕೆಯಾಗಬೇಕು’ ಎಂದು ಘೋಷಣೆ ಕೂಗಿದ್ದಾರೆ.

ಮಧ್ಯಂತರ ಆದೇಶ ನೀಡಲು ಪೀಠವು ನಿರಾಕರಿಸಿದ ತಕ್ಷಣವೇ, ಅರ್ಜಿದಾರರ ಪರ ವಕೀಲರು ನ್ಯಾಯಾಲಯದ ಕೊಠಡಿಯಲ್ಲಿ ಘೋಷಣೆ ಕೂಗಿದರು. ನಂತರ ಅಲ್ಲಿದ್ದ ಉಳಿದ ವಕೀಲರೂ ಘೋಷಣೆಗೆ ದನಿಗೂಡಿಸಿದರು.

ಮನವಿಗಳು

-ವಿದ್ಯಾರ್ಥಿಗಳ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು

-ಪೊಲೀಸರ ಹಲ್ಲೆಯಿಂದ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಕೊಡಿಸಬೇಕು

- ಪ್ರಕರಣದ ತನಿಖೆಗೆ ಉನ್ನತಮಟ್ಟದ ನ್ಯಾಯಾಂಗ ಆಯೋಗ ರಚಿಸಬೇಕು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.