ADVERTISEMENT

ಹೆಣ್ಣುಮಕ್ಕಳ ಶೌಚಾಲಯ ನಿರ್ಮಾಣಕ್ಕೆ ರಾಷ್ಟ್ರೀಯ ಮಾದರಿ ರೂಪಿಸಿ: ಸುಪ್ರೀಂ

ಪಿಟಿಐ
Published 6 ನವೆಂಬರ್ 2023, 16:27 IST
Last Updated 6 ನವೆಂಬರ್ 2023, 16:27 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ಸರ್ಕಾರಿ ಅನುದಾನಿತ ಮತ್ತು ವಸತಿ ಶಾಲೆಗಳಲ್ಲಿ ಬಾಲಕಿಯರ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ನಿರ್ಮಿಸಲು ರಾಷ್ಟ್ರೀಯ ಮಾದರಿ ರೂಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸುಪ್ರೀಂ ಕೋರ್ಟ್‌ ಮುಖ್ಯನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠವು ರಾಷ್ಟ್ರ ಮಟ್ಟದಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ‘ಸ್ಯಾನಿಟರಿ ನ್ಯಾಪ್‌ಕಿನ್‌’ಗಳನ್ನು ವಿತರಿಸಲು ರೂಪಿಸಿರುವ ನೀತಿ ಬಗ್ಗೆಯೂ ಕೇಂದ್ರ ಸರ್ಕಾರದಿಂದ ಮಾಹಿತಿ ಕೇಳಿದೆ.

ADVERTISEMENT

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೂ ಒಳಗೊಂಡ ಪೀಠ, ಸ್ಯಾನಿಟರಿ ನ್ಯಾಪ್‌ಕಿನ್‌ಗಳ ವಿತರಣೆಯ ಕಾರ್ಯವಿಧಾನದಲ್ಲಿ ಕೇಂದ್ರ ಏಕರೂಪತೆ ತರಬೇಕು ಎಂದು ಹೇಳಿದೆ.

ಶಾಲಾ ಬಾಲಕಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ವಿತರಿಸುವ ಕರಡು ರಾಷ್ಟ್ರೀಯ ನೀತಿ ರೂಪಿಸಲಾಗಿದೆ ಮತ್ತು ಅಭಿಪ್ರಾಯ ಕೋರಿ ಸಂಬಂಧಪಟ್ಟವರಿಗೆ ಕಳುಹಿಸಲಾಗಿದೆ ಎಂದು ವಿಚಾರಣೆ ವೇಳೆ ಕೇಂದ್ರವು ಪೀಠಕ್ಕೆ ತಿಳಿಸಿದೆ. 

ಬಾಲಕಿಯರ ಮುಟ್ಟಿನ ನೈರ್ಮಲ್ಯದ ಬಗ್ಗೆ ಏಕರೂಪದ ರಾಷ್ಟ್ರೀಯ ನೀತಿ ರೂಪಿಸುವ ಬಗ್ಗೆ ಕೇಂದ್ರಕ್ಕೆ ತಮ್ಮ ಪ್ರತಿಕ್ರಿಯೆ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಈ ಹಿಂದೆ ಎಚ್ಚರಿಕೆ ನೀಡಿತ್ತು.

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಸಮನ್ವಯ ಸಾಧಿಸಲು ಮತ್ತು ರಾಷ್ಟ್ರೀಯ ನೀತಿ ರೂಪಿಸಲು ಬೇಕಿರುವ ಅಂಕಿ–ಅಂಶ ಸಂಗ್ರಹಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ (ಎಂಒಎಚ್ಎಫ್‌ಡಬ್ಲ್ಯೂ) ಕಾರ್ಯದರ್ಶಿಯನ್ನು ನೋಡಲ್ ಅಧಿಕಾರಿಯಾಗಿ ಸುಪ್ರೀಂ ಕೋರ್ಟ್ ಏಪ್ರಿಲ್ 10ರಂದು ನೇಮಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.