ನವದೆಹಲಿ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆಯಲಾಗಿದ್ದ ಬಹುಕೋಟಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಗಳನ್ನು ಹಿಂದಿರುಗಿಸುವಂತೆ ಮಾಡಿದ್ದ ಮನವಿಯನ್ನು ತಿರಸ್ಕರಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಜಯಲಲಿತಾ ಅವರ ಉತ್ತರಾಧಿಕಾರಿಗಳಲ್ಲಿ ಒಬ್ಬರು ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.
ಕರ್ನಾಟಕ ಹೈಕೋರ್ಟ್ 2025ರ ಜನವರಿ 13ರಂದು ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ. ಅರ್ಜಿದಾರರಾದ ಜೆ. ದೀಪಾ ಅವರ ಪರವಾಗಿ ವಕೀಲ ಎಂ. ಸತ್ಯಕುಮಾರ್ ಅವರು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
‘ಜಪ್ತಿ ಮಾಡಿಕೊಂಡಿರುವ ಆಸ್ತಿಗಳನ್ನು ಹಿಂತಿರುಗಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.
ಪ್ರಾಸಿಕ್ಯೂಷನ್ ವಶಪಡಿಸಿಕೊಂಡ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಯಲಲಿತಾ ಅವರನ್ನು ಅಪರಾಧಿ ಎಂದು ಪರಿಗಣಿಸಲು ಆಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ 2017ರಲ್ಲಿ ತೀರ್ಪು ನೀಡಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಹೈಕೋರ್ಟ್ 2015ರ ಮೇ 11ರಂದು ಜಯಲಲಿತಾ ಅವರನ್ನು ಖುಲಾಸೆಗೊಳಿಸುವ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್ ಮೊರೆಹೋಗಿತ್ತು. ಅದರ ತೀರ್ಪು (2017ರ ಫೆಬ್ರುವರಿ 14) ಬರುವುದಕ್ಕೂ ಮುನ್ನ, ಅಂದರೆ 2016ರ ಡಿಸೆಂಬರ್ 5ರಂದು ಜಯಲಲಿತಾ ಅವರು ನಿಧನರಾದರು ಎಂದು ಅರ್ಜಿದಾರರು ತಿಳಿಸಿದ್ದಾರೆ.
ಕರ್ನಾಟಕ ಹೈಕೋರ್ಟ್‌ನ 2025ರ ಜನವರಿ 13ರ ತೀರ್ಪು ಮತ್ತು ವಿಶೇಷ ನ್ಯಾಯಾಲಯ ನೀಡಿದ್ದ 2025ರ ಜನವರಿ 29ರ ಆದೇಶವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ. ಜಯಲಲಿತಾ ಅವರ ಆಸ್ತಿಗಳನ್ನು ತಮಿಳುನಾಡು ರಾಜ್ಯಕ್ಕೆ ಹಸ್ತಾಂತರಿಸುವಂತೆ ವಿಶೇಷ ನ್ಯಾಯಾಲಯ ಅಧಿಕಾರಿಗಳಿಗೆ ನಿರ್ದೇಶಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.