ನವದೆಹಲಿ: ದೆಹಲಿ ಶಿಕ್ಷಣ ಇಲಾಖೆಯ ವಿರುದ್ಧ ಸುಳ್ಳು ಆರೋಪ ಹೊರಿಸಿರುವ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ, ರಾಷ್ಟ್ರ ರಾಜಧಾನಿಯಲ್ಲಿರುವ ಶಿಕ್ಷಕರನ್ನು ಅಪಹಾಸ್ಯ ಮಾಡುತ್ತಿದ್ದಾರೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪ ಮಾಡಿದ್ದಾರೆ.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಲೆಫ್ಟಿನೆಂಟ್ ಗವರ್ನರ್ ಬರೆದಿರುವ ಪತ್ರವು ರಾಜಕೀಯ ಪ್ರೇರಿತವಾಗಿದೆ ಎಂದು ಶಿಕ್ಷಣ ಖಾತೆಯನ್ನು ಹೊಂದಿರುವ ಸಿಸೋಡಿಯಾ ಹೇಳಿದರು.
ರಾಜಕೀಯ ಉದ್ದೇಶದಿಂದ ಲೆಫ್ಟಿನೆಂಟ್ ಗವರ್ನರ್ ಪತ್ರ ಬರೆದಿದ್ದು, ದೆಹಲಿಯ ಶಿಕ್ಷಣ ಇಲಾಖೆಯಲ್ಲಿ ಯಾವುದೇ ಕೆಲಸವಾಗಿಲ್ಲ ಎಂದು ದೂರಿದ್ದಾರೆ. ಅವರ ಆರೋಪಗಳು ದೆಹಲಿಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮಾಡಿದ ಅವಮಾನ. ನಮ್ಮ ಅಧ್ಯಾಪಕರ ಕೆಲಸವನ್ನು ಅಣಕಿಸಬೇಡಿ ಎಂದು ಅವರನ್ನು ವಿನಂತಿಸುತ್ತೇನೆ ಎಂದು ಹೇಳಿದರು.
ಶುಕ್ರವಾರ ದೆಹಲಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಲೆಫ್ಟಿನೆಂಟ್ ಗವರ್ನರ್, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳನ್ನು ಬೊಟ್ಟು ಮಾಡಿದ್ದರು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಉಲ್ಲೇಖ ಮಾಡಿದ್ದರು. 2012-2013ರಲ್ಲಿ ಶೇ. 70.73ರಿಂದ 2020ರ ವೇಳೆಗೆ ಶೇ. 60.65ಕ್ಕೆ ಕುಸಿದಿದೆ ಎಂದು ಹೇಳಿದ್ದರು.
ಇದರೊಂದಿಗೆ ದೆಹಲಿ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ನಡುವಣ ಸಂಘರ್ಷ ತಾರಕಕ್ಕೇರಿದೆ.
ದೆಹಲಿಯ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ 16 ಲಕ್ಷದಿಂದ 15 ಲಕ್ಷಕ್ಕೆ ಇಳಿದಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಆರೋಪಿಸಿದ್ದಾರೆ. ಆದರೆ ವಿದ್ಯಾರ್ಥಿಗಳ ಸಂಖ್ಯೆ 18 ಲಕ್ಷಕ್ಕೆ ಏರಿಕೆಯಾಗಿದೆ. ಮೂಲಸೌಕರ್ಯಗಳ ಗುಣಮಟ್ಟವು ವೃದ್ಧಿಸಿದೆ. ಆದರೆ ಎಲ್.ಜಿ ಆರೋಪದಿಂದ ರಾಜಧಾನಿಯ ಸಂಪೂರ್ಣ ಶಿಕ್ಷಣ ವ್ಯವಸ್ಥೆಯನ್ನೇ ಅವಮಾನ ಮಾಡಿದ್ದಾರೆ ಎಂದು ಸಿಸೋಡಿಯಾ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.