ADVERTISEMENT

ಬಿಹಾರ ಚುನಾವಣೆ: ನಿತೀಶ್ ನೇತೃತ್ವ ಬೇಡವೆಂದ ಎಲ್‌ಜೆಪಿ, ಬಿಜೆಪಿಗೆ ಮಾತ್ರ ಬೆಂಬಲ

ಏಜೆನ್ಸೀಸ್
Published 4 ಅಕ್ಟೋಬರ್ 2020, 13:12 IST
Last Updated 4 ಅಕ್ಟೋಬರ್ 2020, 13:12 IST
ಎಲ್‌ಜೆಪಿ ಅಧ್ಯಕ್ಷ ಚಿರಾಗ್‌ ಪಾಸ್ವಾನ್‌ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌
ಎಲ್‌ಜೆಪಿ ಅಧ್ಯಕ್ಷ ಚಿರಾಗ್‌ ಪಾಸ್ವಾನ್‌ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌   

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಯಲ್ಲಿ ಸ್ಪರ್ಧಿಸದಿರಲು ಲೋಕ ಜನಶಕ್ತಿ ಪಾರ್ಟಿ (ಎಲ್‌ಜೆಪಿ) ಭಾನುವಾರ ನಿರ್ಧರಿಸಿದೆ.

ಬಿಹಾರದಲ್ಲಿ ಜೆಡಿ(ಯು) ಮತ್ತು ಬಿಜೆಪಿ ಮೈತ್ರಿ ಸರ್ಕಾರ ಅಸ್ಥಿತ್ವದಲ್ಲಿದ್ದು, ಎನ್‌ಡಿಎ ಮೈತ್ರಿ ಪಕ್ಷವಾಗಿರುವ ಎಲ್‌ಜೆಪಿ ಬಿಹಾರ ವಿಧಾನಸಭೆ ಚುನಾವಣೆಯನ್ನು ಜೆಡಿ(ಯು) ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನಾಯಕತ್ವದಲ್ಲಿ ಎದುರಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಎಲ್‌ಜೆಪಿ ಅಧ್ಯಕ್ಷ ಚಿರಾಗ್‌ ಪಾಸ್ವಾನ್‌ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿಗೆ ಬೆಂಬಲ ನೀಡಲು ನಿರ್ಣಯ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಾಮರ್ಥ್ಯ ಬಲಪಡಿಸಲು ಪಕ್ಷದ ಶಾಸಕರು ಕಾರ್ಯಾಚರಣೆ ನಡೆಸಲಿದ್ದಾರೆ ಎಂದು ಎನ್‌ಜೆಪಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ADVERTISEMENT

ಎನ್‌ಡಿಎ ಬಿಹಾರ ಚುನಾವಣೆಯನ್ನು ನಿತೀಶ್‌ ಕುಮಾರ್‌ ಅವರ ನೇತೃತ್ವದಲ್ಲಿ ಎದುರಿಸಲಿದೆ ಎಂದು ಈಗಾಗಲೇ ಬಿಜೆಪಿ ಘೋಷಿಸಿದೆ. ಆದರೆ, ಬಿಜೆಪಿಗೆ ಮಾತ್ರವೇ ಬೆಂಬಲಿಸುವ ನಿರ್ಣಯ ತೆಗೆದುಕೊಳ್ಳುವ ಮೂಲಕ ಎಲ್‌ಜೆಪಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಯಿಂದ ಹೊರ ನಡೆದಂತಾಗಿದೆ.

ಅಕ್ಟೋಬರ್‌ 28ರಿಂದ ಚುನಾವಣೆ ಆರಂಭವಾಗಲಿದ್ದು, ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿಯು ಸಭೆ ಸೇರಿದ್ದು, ಚುನಾವಣೆಗೆ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಿದೆ.

ಕೇಂದ್ರ ಸಚಿವ, ಎಲ್‌ಜೆಪಿ ನಾಯಕ ರಾಮ್‌ವಿಲಾಸ್‌ ಪಾಸ್ವಾನ್ ಅವರು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್‌ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ನಾಯಕರು, ಪಾಸ್ವಾನ್ ಅವರ ಪುತ್ರ ಚಿರಾಗ್‌ ಜತೆ ಮಾತನಾಡಿ, ಆರೋಗ್ಯ ವಿಚಾರಿಸಿದ್ದಾರೆ ಎಂದು ಎಲ್‌ಜೆಪಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.